ಭಟ್ಕಳ: ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಪರಿಚಯ ಮಾಡಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಭಟ್ಕಳ ಶಹರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹೊನ್ನಾವರದ ಮಂಕಿ ಭಾಷಾ ಕಾಲೋನಿ ನಿವಾಸಿ, ಪ್ರಸ್ತುತ ಬೆಂಗಳೂರಿನ ಉಬರ್ ಪಾರ್ಸಲ್ ಸೇವೆಯಲ್ಲಿ ಕೆಲಸ ಮಾಡುತ್ತಿರುವ 31 ವರ್ಷದ ಮಹ್ಮದ್ ಯುಶಾ ಬಂಧಿತ ಆರೋಪಿ.
ಭಟ್ಕಳದ ಮುಗ್ಗುಂಕಾಲನಿಯ ನಿವಾಸಿಯೊಬ್ಬರು ಜನವರಿ 22, 2026 ರಂದು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯು ಸುಮಾರು ಒಂದು ವರ್ಷದ ಹಿಂದೆ ಮಹಿಳೆಯ ಪರಿಚಯ ಮಾಡಿಕೊಂಡು, ಸಲುಗೆ ಬೆಳೆಸಿ ಅವರ ಖಾಸಗಿ ಫೋಟೋಗಳನ್ನು ಪಡೆದುಕೊಂಡಿದ್ದ.
ನಂತರ ಪದೇ ಪದೇ ಕರೆ ಮಾಡಿ ಕಿರುಕುಳ ನೀಡಲು ಆರಂಭಿಸಿದ ಈತ, ತನ್ನೊಂದಿಗೆ ಮಾತನಾಡದಿದ್ದರೆ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದನು. ಅಷ್ಟೇ ಅಲ್ಲದೆ, ಫಿರ್ಯಾದಿಯ ಕುಟುಂಬದವರಿಗೆ ಫೋಟೋಗಳನ್ನು ಕಳುಹಿಸಿದ್ದಲ್ಲದೆ, ಅವರ ಗೆಳತಿಗೂ ಕರೆ ಮಾಡಿ ಮಾನಸಿಕ ಹಿಂಸೆ ನೀಡಿದ್ದನು.
ಈ ದೂರಿನನ್ವಯ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗೋಕರ್ಣ | ‘ಮಾದಕ ಚಾಕಲೇಟ್’ ಭೀತಿ: ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ
ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್ ಫೋನ್‌ಗಳು ಹಾಗೂ ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆಯ ವೇಳೆ ಆರೋಪಿಯು ಇನ್ನೂ ಹಲವಾರು ಮಹಿಳೆಯರೊಂದಿಗೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ದೀಪನ್ ಎಂ.ಎನ್ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಭಟ್ಕಳ ಶಹರ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಶಪಡಿಸಿಕೊಂಡ ಮೊಬೈಲ್‌ಗಳನ್ನು ಎಫ್.ಎಸ್.ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





