ಔರಾದ್ ತಾಲೂಕಿನ ಜಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥ ರಾಗಿದ್ದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.
ಆಸ್ಪತ್ರೆಯಲ್ಲಿ ದಾಖಲಾದ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಅವರು ಬಳಿಕ ಘಟನೆ ನಡೆದ ಜಮಲಾಪುರ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ, ತಹಸೀಲ್ದಾರ್ ಮಹೇಶ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾ.ಗಾಯತ್ರಿ ಸೇರಿದಂತೆ ಮತ್ತಿತರರಿದ್ದರು.
ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದ ಶಾಸಕ ಪ್ರಭು ಚವ್ಹಾಣ
ಔರಾದ ತಾಲೂಕಿನ ಜಮಾಲಪೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪ್ರಭು ಬಿ.ಚವ್ಹಾಣ ಅವರು ಆಸ್ಪತ್ರೆಗೆ ದೌಡಾಯಿಸಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆಯ ವಿವರ ಪಡೆದು, ಮಕ್ಕಳಿಗೆ ಅಗತ್ಯವಿರುವ ಎಲ್ಲ ರೀತಿಯ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ಬಳಿಕ ಮಾತನಾಡಿದ ಅವರು, ʼಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಬೇಧಿಯಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು ಭೇಟಿ ಮಾಡಿ ಮಾತನಾಡಿಸಿದ್ದೇನೆ. ವೈದ್ಯರು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆʼ ಎಂದರು.
ಇದನ್ನೂ ಓದಿ : ಔರಾದ್ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಔರಾದ(ಬಿ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ. ಕಾಲ ಕಾಲಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿಲ್ಲ. ಹಾಗಾಗಿ ಅಧಿಕಾರಿಗಳ ಮೇಲೆ ನಿಯಂತ್ರಣ ಕಾಣಿಸುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳ ವೈಫಲ್ಯವೂ ಇದರಲ್ಲಿ ಎದ್ದು ಕಾಣಿಸುತ್ತಿದೆʼ ಎಂದರು.





