ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜ.26ರಂದು ಗಣರಾಜ್ಯೋತ್ಸವ ಪ್ರಯುಕ್ತ ಜ.25 ಮತ್ತು 26 ರಂದು 2 ದಿನಗಳ ಕಾಲ ಸಂಘ-ಸಂಸ್ಥೆಗಳು, ಸರ್ಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಾಲಂಕಾರ ಮಾಡುವುದು. ಜ.26 ರಂದು ಬೆಳಿಗ್ಗೆ 8 ಗಂಟೆಗೆ ಸರ್ಕಾರಿ-ಅರೆ ಸರ್ಕಾರಿ, ವಿವಿಧ ಶಾಲಾ-ಕಾಲೇಜು ಮತ್ತು ಸಂಘ-ಸಂಸ್ಥೆಗಳ ಕಟ್ಟಡಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಎಲ್ಲಾ ಶಾಲಾ-ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳೊಂದಿಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8:45 ಗಂಟೆಯೊಳಗೆ ಹಾಜರಾಗಬೇಕುʼ ಎಂದು ತಿಳಿಸಿದರು.
ಜ.26ರಂದು ಬೆಳಿಗ್ಗೆ 9ಗಂಟೆಗೆ ಬೀದರ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು. ನೆಹರೂ ಕ್ರೀಡಾಂಗಣದಲ್ಲಿ ಜರುಗುವ ಪಥ ಸಂಚಲನ ಶಾಲಾ ಮಕ್ಕಳಿಂದ ಕವಾಯತು ಮತ್ತು ಇತ್ಯಾದಿ ಕಾರ್ಯಕ್ರಮಗಳನ್ನು ನಿಯಮಾನುಸಾರ ಅಚ್ಚುಕಟ್ಟಾಗಿ ನೆರವೇರಿಸಲು ರಚಿಸಿದ ಉಪ ಸಮಿತಿಯ ಎಲ್ಲಾ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಶಿಕ್ಷಣ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ವ್ಯವಸ್ಥೆ ಮಾಡಬೇಕು. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಾನೀಯರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಗಣರಾಜ್ಯೋತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಸಂಜೆ 5.30ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ : ಬೀದರ್ | ಬರೀದಶಾಹಿ ಉದ್ಯಾನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಸಭೆಯಲ್ಲಿ ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಬೀದರ ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಸಂಘ-ಸಂಸ್ಥೆ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.





