ಬೀದರ್ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಸರಿದೂಗಿಸುವ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ʼಔರಾದ್ ಮತ್ತು ಭಾಲ್ಕಿ ತಾಲ್ಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ನೀಡಿದೆ. ಈ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎಲ್ಲಿಯಾದರೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ 24 ಗಂಟೆಗಳೊಳಗೆ ಪರಿಹಾರ ಕಲ್ಪಿಸಬೇಕುʼ ಎಂದರು.
ʼಬೋರವೆಲ್ ಬತ್ತಿದರೆ ಅಥವಾ ಬಾವಿಯಲ್ಲಿ ನೀರು ಇಲ್ಲದಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಅಗತ್ಯವಿದ್ದಲ್ಲಿ ಖಾಸಗಿ ಬೋರವೆಲ್‌ಗಳನ್ನು ಬಾಡಿಗೆ ಪಡೆದು ನೀರು ಒದಗಿಸಬೇಕು. ಜಿಲ್ಲೆಯ ತಾಂಡಾ ಹಾಗೂ ಹಟ್ಟಿ ಪ್ರದೇಶಗಳಲ್ಲಿಯೂ ಸೇರಿದಂತೆ ಎಲ್ಲಿಯೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ನಗರದಲ್ಲಿನ ಕೆಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದ್ದು, ಅದಕ್ಕೂ ಶೀಘ್ರ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕುʼ ಎಂದು ತಿಳಿಸಿದರು.
ಸರ್ಕಾರದ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗೆ ಅನುದಾನ ಬಿಡುಗಡೆ ಮಾಡುವ ವಿಚಾರ ಪರಿಗಣನೆಯಲ್ಲಿದ್ದು, ಜಿಲ್ಲೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆʼ ಎಂದರು.
ಗೃಹ ಬಳಕೆ ಸಿಲಿಂಡರ್ ಕೊರತೆಯಿಲ್ಲ :
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆ ಸಾಮಾನ್ಯವಾಗಿ ನಡೆಯುತ್ತಿದ್ದು ಯಾವುದೇ ಕೊರತೆ ಇಲ್ಲ. ಆದರೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ವಿತರಣೆಯಲ್ಲಿ ಒಂದು ವಾರದಿಂದ ಹತ್ತು ದಿನಗಳವರೆಗೆ ವಿಳಂಬವಾಗುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಆದ್ದರಿಂದ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದುʼ ಎಂದು ಸಚಿವ ಈಶ್ವರ ಖಂಡ್ರೆ ಅವರು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 29 ಗ್ಯಾಸ್ ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿದ್ದು, ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟವಾಗದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಇದನ್ನೂ ಓದಿ : ಬೀದರ್ | ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ
ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಷ್ ರೆಡ್ಡಿ ಹಾಗೂ ಬಸವಕಲ್ಯಾಣ ಹಾಗೂ ಬೀದರ ಸಹಾಯಕ ಆಯುಕ್ತರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





