ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾರ್ಚ್ 17 ರಂದು ಬೀದರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಬೀದರ ನಗರದ ಖಾಸಗಿ ಹೊಟೇಲ್‌ನಲ್ಲಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಒಳಮೀಸಲಾತಿ ಜಾರಿಯಿಂದ ಬಲಗೈ ಸಮುದಾಯದವರಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳ ಆಯ್ಕೆಯಲ್ಲಿ ತಾರತಮ್ಯ ಉಂಟಾಗುತ್ತಿದೆ ಎಂಬ ಆರೋಪ ವ್ಯಕ್ತಪಡಿಸಲಾಯಿತು. ರೋಸ್ಟರ್ ಬಿಂದುವಿನ ಕಾರಣದಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಸಭೆಯಲ್ಲಿ ತಿಳಿಸಲಾಯಿತು.
ಉದ್ದೇಶಪೂರ್ವಕವಾಗಿ ಬಲಗೈ ಸಮುದಾಯದ ಸಚಿವರ ತೆಜೋವಧೆ ಮಾಡಲಾಗುತ್ತಿದೆ ಹಾಗೂ ಅಸ್ಪೃಶ್ಯ ಸಮಾಜದಲ್ಲಿ ಅಶಾಂತಿ ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡುವ ಉದ್ದೇಶದಿಂದ ಮಾರ್ಚ್ 17ರಂದು ಬೀದರನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಯಿತು.
ಸಂಬಂಧಪಟ್ಟ ಶಾಸಕರು ಹಾಗೂ ಸಚಿವರು ಬಲಗೈ ಸಮುದಾಯಕ್ಕೆ ಒಳಮೀಸಲಾತಿಯಿಂದ ಅನ್ಯಾಯವಾಗದಂತೆ ಧ್ವನಿ ಎತ್ತುವಂತೆ ಪತ್ರ ಬರೆದು ಒತ್ತಾಯಿಸಲು ಕೂಡ ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಪ್ರತಿಭಟನೆಯಲ್ಲಿ ಬೀದರ ಜಿಲ್ಲೆಯ ಸ್ವಾಭಿಮಾನಿ ಅಂಬೇಡ್ಕರ್ ವಾದಿಗಳು, ಬಲಗೈ ಸಮುದಾಯದ ಹೋರಾಟಗಾರರು, ಸರ್ಕಾರಿ ಹಾಗೂ ಅರೆಸರ್ಕಾರಿ ಮತ್ತು ನಿವೃತ್ತ ನೌಕರರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿದ್ಯಾರ್ಥಿಗಳು, ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವ ಪದವೀಧರರು, ಮಹಿಳೆಯರು, ಯುವಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.
ಇದನ್ನೂ ಓದಿ : ಬೀದರ್ | ಸರ್ಕಾರಿ ಶಾಲೆಗಳಲ್ಲಿ ಮೌಲ್ಯಯುತ ಶಿಕ್ಷಣ
ಈ ವಿಷಯವನ್ನು ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮಹೇಶ ಗೋರನಾಳಕರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಅರುಣ ಪಟೇಲ್, ಪವನ ಮೀಠಾರೆ, ಸಂಜುಕುಮಾರ ಸಾಗರ, ಪ್ರದೀಪ್ ನಾಟೇಕರ್, ರಾಹುಲ್ ಡಾಂಗೆ ಮತ್ತು ಪ್ರಕಾಶ ರಾವಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





