ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ. ಮಹಿಳೆಯರು ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು, ಅವರ ಸಬಲೀಕರಣದಿಂದ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಸುರೇಖಾ ನುಡಿದರು.
ಬೀದರ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಮಾತನಾಡಿ, ʼಮಹಿಳೆಯರು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಸಮಾಜದಲ್ಲಿ ಮುನ್ನಡೆದರೆ ಸದೃಢ ದೇಶ ನಿರ್ಮಾಣ ಸಾಧ್ಯʼ ಎಂದು ಅಭಿಪ್ರಾಯಪಟ್ಟರು.
ಮಹಿಳಾ ದಿನಾಚರಣೆ ಅಂಗವಾಗಿ ಗುಂಡು ಎಸೆತ, ಲೆಮನ್ ಸ್ಪೂನ್, ತ್ರೋಬಾಲ್, ಗಾಯನ, ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಅವರು ವಹಿಸಿದ್ದರು. ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ವಿಠಲದಾಸ್ ಪ್ಯಾಗೆ, ಅಬ್ದುಲ್ ಸತ್ತಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ಭಾಗವಹಿಸಿದರು.
ಇದನ್ನೂ ಓದಿ : ಬೀದರ್ | ಸಮಗ್ರ ಕೃಷಿಯಲ್ಲಿ ಖುಷಿ ಕಂಡ ರೈತ ದಂಪತಿ : ಇವರ ಬದುಕು ಅನ್ನದಾತರಿಗೆ ಮಾದರಿ!
ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ ಅವರು ಸ್ವಾಗತಿಸಿದರು. ಡಾ.ಅಂಬರೀಷ್ ವೀರನಾಯಕ ನಿರೂಪಿಸಿದರು. ವಿಶೇಷ ಅಧಿಕಾರಿ ಡಾ.ರವೀಂದ್ರ ಗಬಾಡೆ ಅವರು ವಂದಿಸಿದರು.





