ಬೀದರ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಆಗ್ರಹಿಸಿದ್ದಾರೆ.
ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತರು ದೀರ್ಘಕಾಲದಿಂದ ಸಮರ್ಪಕ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದು, ಮಾನವೀಯತೆ ಮತ್ತು ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕೆಂದು ಸಂತ್ರಸ್ತರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿಯು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದ ವೇಳೆ ಸಂತ್ರಸ್ತರ ಬೇಡಿಕೆಗಳನ್ನು ಪರಿಗಣಿಸಿ ಉನ್ನತ ಮಟ್ಟದ ತಾಂತ್ರಿಕ ಸಮಿತಿಯನ್ನು ರಚಿಸಲು ಆದೇಶಿಸಿದ್ದರು. ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರಚನೆಯಾದ ಸಮಿತಿಯು ಸುಮಾರು ಎರಡು ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಸಂತ್ರಸ್ತರಲ್ಲಿ ಅಸಮಾಧಾನ ಉಂಟುಮಾಡಿದೆ ಎಂದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸಚಿವ ರಹೀಂ ಖಾನ್ ಅವರನ್ನು ಭೇಟಿ ಮಾಡಿ ತ್ವರಿತ ಕ್ರಮಕ್ಕೆ ಮನವಿ ಮಾಡಲಾಗಿದೆ.
ಇದೇ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ..
ಬೀದರ ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿರುವ ಕಾರಂಜಾ ಸಂತ್ರಸ್ತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಸ್ತುತ ಅಧಿವೇಶನದಲ್ಲೇ ಸರ್ವಪಕ್ಷಗಳ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಬೇಕೆಂದು ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚಕನಳ್ಳಿ, ಮುಖಂಡರಾದ ರಾಜಪ್ಪಾ ಕೋಸಮ್, ವಿನಯಕುಮಾರ್ ಮಾಳಗೆ, ರೋಹನಕುಮಾರ್, ರಾಜಕುಮಾರ ಭುಸ್ಸಾ, ಸಂಗಾರೆಡ್ಡಿ ಔರಾದ, ಮಹ್ಮದ್ ಸೋಲಾಪೂರಿ ಬಗದಲ್, ಇಸುಫ್ ರೇಕುಳಗಿ, ಮಾದಪ್ಪ ಖೌದೆ ಹಾಗೂ ರೇವಣಪ್ಪಾ ಖೇಣಿರಂಜೋಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.





