ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು, ಅಗತ್ಯವಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಚ್ಚರಿಸಿದರು.
ಬೀದರ್ ನಗರದ ಶಾಹೀನ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬೀದರ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2ರಲ್ಲಿ ಶೂನ್ಯ ಹಾಗೂ ಶೇ.50ರಷ್ಟು ಫಲಿತಾಂಶ ಪಡೆದ ಶಾಲೆಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ವಿಶೇಷ ತರಗತಿ ನಡೆಸಿ 3ನೇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಂತೆ ಶ್ರಮಿಸಬೇಕು’ ಎಂದು ಸೂಚಿಸಿದರು.
ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗಾಗಿ ಎಲ್ಲಾ ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆ ಮಾಡಬೇಕು. ಫಲಿತಾಂಶ ಸುಧಾರಣೆಗೆ ಕೆಕೆಆರ್‌ಡಿಬಿ ವತಿಯಿಂದ ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ. ವೆಚ್ಚದಲ್ಲಿ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಿಸಿ ವಿಶೇಷ ಬೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹಲವು ಕಾರ್ಯಾಗಾರಗಳನ್ನು ನಡೆಸಿದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ’ ಎಂದು ಅವರು ವಿಷಾದಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಳಿಸಲು ಶಿಕ್ಷಣ ಇಲಾಖೆ 29 ಅಂಶಗಳ ಕಾರ್ಯಕ್ರಮ ರೂಪಿಸಿದೆ. ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಗುಂಪು ಚಟುವಟಿಕೆ, ಪೋಷಕರ ಸಭೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ. ಆದರೂ ಫಲಿತಾಂಶ ಸುಧಾರಣೆ ಆಗುತ್ತಿಲ್ಲ’ ಎಂದರು.
‘ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಪೈಕಿ ಬೀದರ ಜಿಲ್ಲೆಗೆ 34ನೇ ಸ್ಥಾನ ಬಂದಿದೆ. ಖಾಸಗಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಸಾಧನೆ ಏಕೆ ಕಡಿಮೆಯಾಗಿದೆ ಎಂಬುದನ್ನು ಬಿಇಒ ಮತ್ತು ಬಿಆರ್‌ಸಿ ಅಧಿಕಾರಿಗಳು ಪರಿಶೀಲಿಸಬೇಕು. ಉತ್ತಮ ಫಲಿತಾಂಶ ನೀಡುವ ಶಾಲಾ ಶಿಕ್ಷಕರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಗುವುದು’ ಎಂದರು.
ಬೀದರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಮಾತನಾಡಿ, ‘ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗುರುತಿಸಿ ವಿಶೇಷ ಬೋಧನೆ ನೀಡಬೇಕು’ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಇದನ್ನೂ ಓದಿ: ಬೀದರ್ | ಮುಷ್ಕರ : ಹೊಸ ಕಾರ್ಮಿಕ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ
ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ ರಂಗನಾಥ, ‘ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಜಿ. ಸುರೇಶ್, ಡಯಟ್ ಪ್ರಾಚಾರ್ಯರು, ಕಾರ್ಯಕ್ರಮ ಸಂಯೋಜಕ ಸೈಯದ್ ಪುರ್ಖಾನ್, ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಹಜಿಜ್ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಎಲ್ಲಾ ತಾಲ್ಲೂಕಿನ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.





