ಬೀದರ್ ನಗರದ ಚಿಕ್ಕಪೇಟೆಯಲ್ಲಿರುವ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾದ ಘಟನೆ ನಡೆಯಿತು.
ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಕಚೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಯನ್ನು ಹೊರ ಕಳಿಸಿದರು. ಬಳಿಕ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲಿಸಿದರು. ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಆದರೆ, ಅಲ್ಲಿ ಯಾವುದೇ ರೀತಿಯ ಸ್ಫೋಟಕ ಪತ್ತೆಯಾಗಲಿಲ್ಲ ಎಂಬುದು ತಿಳಿದು ಬಂದಿದೆ.
ನವದೆಹಲಿಯಿಂದ ಬೀದರ್ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ಇಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇಡೀ ಕಚೇರಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದು, ಹೆದರಿಸಲು ಈ ರೀತಿ ಕೃತ್ಯ ಎಸಗಿರುವುದು ಗಮನಕ್ಕೆ ಬಂದಿದೆ’ ಎನ್ನಲಾಗಿದೆ.
ನನ್ನ ಹೆಸರು ಆರ್ನಾ ಅಶ್ವಿನ್ ಶೇಖರ್ (13). ಚೆನ್ನೈನ ಮೈಲಾಪುರದವನು. ಬೀದರ್ ಮತ್ತು ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐದು ಆರ್‌ಡಿಎಕ್ಸ್ ಐಇಡಿಗಳನ್ನು ಇಡಲಾಗಿದೆ. ಮಧ್ಯಾಹ್ನ ಎರಡು ಗಂಟೆಯೊಳಗೆ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಸಿಬ್ಬಂದಿಯನ್ನು ತೆರವುಗೊಳಿಸಬೇಕು ಎಂದು ಇಮೇಲ್‌ನಲ್ಲಿ ತಿಳಿಸಲಾಗಿದೆ.





