ಬಾಗೇಪಲ್ಲಿ: ಚುನಾವಣಾ ಅಕ್ರಮದ ಆರೋಪದಡಿ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ತಾತ್ಕಾಲಿಕ ಜಯ ಸಿಕ್ಕಿದೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ತಡೆಯಾಜ್ಞೆ ನೀಡಿದೆ.
ಬಾಗೇಪಲ್ಲಿಯ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಚುನಾವಣಾ ತರಕಾರು ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ಫೆಬ್ರವರಿ 16ರಂದು ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಅನರ್ಹಗೊಳಿಸಿ ಆದೇಶ ನೀಡಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು ಇಂದು ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.
ತಡೆಯಾಜ್ಞೆ : ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲಾಗಿದೆ.
ನೋಟಿಸ್ ಜಾರಿ: ಅರ್ಜಿದಾರ ಮುನಿರಾಜು ಹಾಗೂ ಇತರ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು ವಿವರಣೆ ಕೋರಿದೆ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ನಿಗದಿಪಡಿಸಲಾಗಿದೆ.
ಇದನ್ನು ಓದಿದ್ದೀರಾ..? ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ
ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ಸುಬ್ಬಾರೆಡ್ಡಿ ಅವರು ಕನಿಷ್ಠ ಸೆಪ್ಟೆಂಬರ್ 7ರವರೆಗೂ ಶಾಸಕರಾಗಿ ಮುಂದುವರಿಯಲಿದ್ದಾರೆ. ಕ್ಷೇತ್ರದಲ್ಲೂ ಅವರ ಬೆಂಬಲಿಗರು ಈ ಆದೇಶವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಸುಪ್ರೀಂ ಕೋರ್ಟ್ ಬಂದ ಆದೇಶ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಪಟ್ಟಣದ ಡಿ.ವಿಜಿ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಸಿದರು.





