ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿವರೆಗೂ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು AIDSO ಪ್ರತಿಭಟನೆ ನಡೆಸಿದೆ.
AIDSO ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಲಕ್ಕಪ್ಪ ಸಿ ಬಿ ಮಾತನಾಡಿ, “ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿ ಆಗಲಿಲ್ಲ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಪ್ರಶ್ನೆ ಮಾಡಿದವರನ್ನು ರೌಡಿ ಪಟ್ಟಿಗೆ ಸೇರಿಸಲಾಗುತ್ತಿದೆ: ಕೋಡಿಗಲ್ ರಮೇಶ್ ಆರೋಪ
ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು AIDSO ಜಿಲ್ಲಾ ಸಂಚಾಲಕ ಕಿರಣ್ ಕುಮಾರ್ ವಹಿಸಿದ್ದರು. ಪದವಿ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.





