“ಬಾಲ ಭವನದಿಂದ ಮಕ್ಕಳಿಗಾಗಿ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಆಯೋಜಿಸಿ, ಬಹುಮಾನ ನೀಡಲಾಗುತ್ತಿದೆ” ಎಂದು ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ವಾಸವಿ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರಾಥಮಿಕ ಶಾಲೆಯಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ತಾಲ್ಲೂಕು ಬಾಲಭವನ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬುಧವಾರ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಮಕ್ಕಳಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು ಮತ್ತು ಗ್ರಾಮದಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಸಿಕ್ಕಲ್ಲಿ ತಕ್ಷಣ ತಿಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಡಿ. ಶ್ರೀಕುಮಾರ್ ಮಾತನಾಡಿ, “ಮಕ್ಕಳ ಜ್ಞಾನಾಭಿವೃದ್ಧಿಗಾಗಿ ವಿವಿಧ ಕೌಶಲ್ಯಗಳನ್ನು ಮತ್ತು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಮುಖ್ಯ ವಾಹಿನಿಗೆ ತರುವುದು ರಾಜ್ಯ ಬಾಲಭವನ ಸೊಸೈಟಿಯ ಆಶಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಬಾಲ ಭವನ ಸೊಸೈಟಿಯು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಮಾರ್ಗದರ್ಶನದಂತೆ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ವಿಜೇತ ಮಕ್ಕಳಿಗೆ ಬಹುಮಾನಗಳನ್ನು ನೀಡಲಾಗುತ್ತಿದೆ” ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರೇಣುಕಾ ಬಿದರಗಡ್ಡಿ ಮಾತನಾಡಿ, “ಮಕ್ಕಳಿಗೆ ಉತ್ತಮ ನಡತೆ ಕಲಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಮಕ್ಕಳು ಬಾಲ್ಯದಲ್ಲಿ ಆಸಕ್ತಿಯಿಂದ ಕಲಿಯಬೇಕು” ಎಂದು ಸಲಹೆ ನೀಡಿದರು.
ವಿಜೇತ ಮಕ್ಕಳಿಗೆ ರಾಜ್ಯ ಬಾಲಭವನ ಸಂಸ್ಥೆ ವತಿಯಿಂದ ಪ್ರಮಾಣ ಪತ್ರಗಳನ್ನು ಮತ್ತು ಪೆನ್ನುಗಳನ್ನು ನೀಡಿ ಶುಭ ಹಾರೈಸಲಾಯಿತು.
ಈ ಸುದ್ದಿ ಓದಿದ್ದೀರಾ ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ವೀರ ಮಂಜುಳಾದೇವಿ, ಸಹ ಶಿಕ್ಷಕರಾದ ಮಂಜುಳಾ, ಟಿ.ತ್ರಿವೇಣಿ, ಶಾರದಾ, ಇಂದ್ರಮ್ಮ, ಕವಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.





