ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮಾರ್ಚ್ 6ರಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ಈ ಬಾರಿ ಕರಾವಳಿ ಭಾಗದ ಜನರ ನಿರೀಕ್ಷೆಗಳು ಗರಿಷ್ಠ ಮಟ್ಟಕ್ಕೇರಿವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ 320 ಕಿ.ಮೀ ಉದ್ದದ ಕಡಲತೀರ ಪ್ರದೇಶವು ಆರೋಗ್ಯ, ಪ್ರವಾಸೋದ್ಯಮ, ಕೃಷಿ, ಮೀನುಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ವಿಶೇಷ ಗಮನಕ್ಕೆ ಅರ್ಹವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮೊದಲ ಪ್ರಾಶಸ್ತ್ಯ
ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಲವು ವರ್ಷಗಳ ಬೇಡಿಕೆ. ನಿವೇಶನ ಗುರುತಿಸಲಾಗಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಕರಾವಳಿ ಜಿಲ್ಲೆಯಲ್ಲೇ 10ಕ್ಕೂ ಹೆಚ್ಚು ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು 20ಕ್ಕೂ ಅಧಿಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿದ್ದರೂ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಸೌಲಭ್ಯಗಳ ಕೊರತೆ ಇದೆ. ಈ ಬಜೆಟ್‌ನಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲು ಅನುದಾನ ನೀಡಬೇಕು. ತಾಲೂಕು ಆಸ್ಪತ್ರೆಗಳ ಮೇಲ್ದರ್ಜೆಗೇರಿಕೆ, ಕ್ಯಾನ್ಸರ್ ಮತ್ತು ಹೃದ್ರೋಗ ವಿಶೇಷ ಸರ್ಕಾರಿ ಆಸ್ಪತ್ರೆಗಳ ಸ್ಥಾಪನೆಗೂ ಒತ್ತಾಯ ಕೇಳಿಬರುತ್ತಿದೆ.

ಕಡಲತೀರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ
ಗೋವಾ ಮಾದರಿಯಲ್ಲಿ ಬೀಚ್ ಅಭಿವೃದ್ಧಿ ಮಾಡುವ ಭರವಸೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಆದರೆ ಮಾಸ್ಟರ್ ಪ್ಲಾನ್ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಕಡಲ್ಕೊರೆತ ನಿಯಂತ್ರಣ, ಎತ್ತರದ ರಸ್ತೆ ನಿರ್ಮಾಣ, ಮೂಲ ಸೌಕರ್ಯಗಳನ್ನು ಒದಗಿಸುವುದು ಅವಶ್ಯಕವಾಗಿದೆ.
ಈಗಾಗಲೇ ಕರಾವಳಿ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಕಡಲ್ಕೊರೆತ ನಿಯಂತ್ರಣಕ್ಕೆ ಎತ್ತರದ ರಸ್ತೆ ನಿರ್ಮಾಣ ಅಗತ್ಯವಿದೆ ಎಂದಿದ್ದಾರೆ. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ʼವಾಟರ್ ಮೆಟ್ರೊʼ ಜಾರಿಗೆ ಒತ್ತಾಯಿಸಿದ್ದಾರೆ. ಧಾರ್ಮಿಕ ಪ್ರವಾಸೋದ್ಯಮ, ಸರ್ಕ್ಯೂಟ್ ಟೂರಿಸಂ ಯೋಜನೆಗಳು ಕಾಗದದಲ್ಲೇ ಉಳಿಯಬಾರದು ಎಂಬುದು ಜನರ ಆಶಯ.

ಕೃಷಿ, ನೀರಾವರಿ ಮತ್ತು ಕೈಗಾರಿಕೆ
ಬ್ರಹ್ಮಾವರ ಕೃಷಿ ಅಧ್ಯಯನ ಕೇಂದ್ರದ ಮೂಲಸೌಕರ್ಯ ಅಭಿವೃದ್ಧಿ, ಕೃಷಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಮೇಲ್ದರ್ಜೆಗೇರಿಸುವುದು ಅವಶ್ಯಕವಾಗಿದೆ. ಯಡ್ತಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಸತೀಶ ಕುಮಾರ್ ಶೆಟ್ಟಿ ವಾರಾಹಿ ನೀರಾವರಿ ಯೋಜನೆಯ ಎಡದಂಡೆ ಕಾಮಗಾರಿ ಪೂರ್ಣಗೊಳಿಸಲು ಬಜೆಟ್‌ನಲ್ಲಿ ಅನುದಾನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಸ್ಥಗಿತಗೊಂಡ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದರಿಂದ ರೈತರಿಗೆ ನೆರವಾಗಲಿದೆ. ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಒತ್ತಾಯಿಸಿದ್ದಾರೆ.

ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ
ಕರಾವಳಿಯ 13 ಮೀನುಗಾರಿಕಾ ಬಂದರುಗಳಲ್ಲಿ ಹೂಳೆತ್ತಲು ₹70 ಕೋಟಿ ಯೋಜನೆ ರೂಪಿಸಿರುವುದಾಗಿ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದ್ದಾರೆ. ಡೀಸೆಲ್ ಸಬ್ಸಿಡಿ ಹೆಚ್ಚಳ, ಮಳೆಗಾಲ ಭತ್ಯೆ, ಲೈಫ್ ಜಾಕೆಟ್ ಸಹಾಯಧನ ಮೀನುಗಾರರ ಪ್ರಮುಖ ಬೇಡಿಕೆಗಳಾಗಿವೆ.
ಉಡುಪಿ ಶಾಸಕ ಯಶಪಾಲ ಸುವರ್ಣ ಮೀನುಗಾರಿಕೆ ಮತ್ತು ಬಂದರು ಇಲಾಖೆ ವಿಲೀನಗೊಳಿಸಿ ಎಂಜಿನಿಯರಿಂಗ್ ವಿಭಾಗ ಪ್ರಾರಂಭಿಸುವಂತೆ ಸಲಹೆ ನೀಡಿದ್ದಾರೆ.

ಮೂಲಸೌಕರ್ಯ ಮತ್ತು ಸಾರಿಗೆ
ಬೈಂದೂರು, ಕುಂದಾಪುರ, ಹೆಬ್ರಿ, ಕಾರ್ಕಳ ಭಾಗಗಳಲ್ಲಿ ಮಳೆ ಹಾನಿ ಪರಿಹಾರಕ್ಕೆ ವಿಶೇಷ ಅನುದಾನ ಅಗತ್ಯವಿದೆ. ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಹೆಚ್ಚಳ, ಬ್ರಹ್ಮಾವರ-ಬಾರ್ಕೂರು-ಸಿದ್ದಾಪುರ ರಸ್ತೆ ರಾಜ್ಯ ಹೆದ್ದಾರಿ ಕಾಮಗಾರಿ ವೇಗಗೊಳಿಸುವುದು ಪ್ರಾಥಮಿಕತೆ ಪಡೆಯಬೇಕಿದೆ.
ಕುಂದಾಪುರ ಶಾಸಕ ಕಿರಣ್ ಕೊಡ್ಲಿ ಸಿಆರ್‌ಜೆಡ್ ಕಚೇರಿಯನ್ನು ಮಂಗಳೂರು ಅಥವಾ ಉಡುಪಿಗೆ ಸ್ಥಳಾಂತರಿಸಲು ಸಲಹೆ ನೀಡಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಭೂ ಹಕ್ಕು
ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು, ಭೂ ಅನುದಾನ ನಿಯಮ 5ರ ಪ್ರಕಾರ ಸರ್ಕಾರಿ ಜಮೀನಿನ 50% ದಲಿತರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ರಮ-ಸಕ್ರಮ ಹೆಸರಿನಲ್ಲಿ ಜಮೀನು ಬಲಾಡ್ಯರ ಪಾಲಾಗುತ್ತಿರುವುದನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಆರೋಗ್ಯ, ಪ್ರವಾಸೋದ್ಯಮ, ಕೃಷಿ, ಮೀನುಗಾರಿಕೆ, ಮೂಲಸೌಕರ್ಯ ಮತ್ತು ಸಾಮಾಜಿಕ ನ್ಯಾಯ ಎಲ್ಲವನ್ನೂ ಒಳಗೊಂಡ ಸಮಗ್ರ ಪ್ಯಾಕೇಜ್ ಅಗತ್ಯವಾಗಿದೆ. ವಿಶೇಷವಾಗಿ ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ಈ ಬಜೆಟ್‌ನ ಪ್ರಮುಖ ಆಕರ್ಷಣೆಯಾಗಬಹುದೇ ಎಂಬ ಕುತೂಹಲ ಎಲ್ಲರಲ್ಲೂ ಇದೆ.
ಈ ಬಾರಿ ಬಜೆಟ್‌ನಲ್ಲಿ ಘೋಷಣೆ ಮಾತ್ರವಲ್ಲ, ಕಾರ್ಯಗತಗೊಳ್ಳುವ ಸ್ಪಷ್ಟ ಯೋಜನೆಗಳು ಪ್ರಕಟವಾದರೆ ಕರಾವಳಿಯ ಜನರ ನಿರೀಕ್ಷೆಗೆ ನ್ಯಾಯ ದೊರೆಯಲಿದೆ.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




