ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ ವಿದ್ಯಾ ಪಾಟೀಲ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಲ್ಯಾಣ ಕರ್ನಾಟಕದಲ್ಲಿ ಒಟ್ಟು 9,247 ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಿವೆ. ಇದರಲ್ಲಿ 12.50 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14,000 ಶಿಕ್ಷಕರ ಕೊರತೆ ಇದ್ದರೆ, ಹಿರಿಯ ಮತ್ತು ಪ್ರೌಢಶಾಲೆಗಳಲ್ಲಿ 3,200 ಶಿಕ್ಷಕರ ಕೊರತೆ ಇದೆ. ಒಟ್ಟು 18,000 ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.
“ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದರೂ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅತಿಥಿ ಶಿಕ್ಷಕರಿಂದ ಈ ಶಾಲೆಗಳನ್ನು ನಿರ್ವಹಿಸಲಾಗುತ್ತಿದೆ. ದೇವದುರ್ಗ ಒಂದೇ ತಾಲೂಕಿನಲ್ಲಿ 80 ಶಾಲೆಗಳು ಶೂನ್ಯ ಶಿಕ್ಷಕರ ಅವಸ್ಥೆಯಲ್ಲಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿಗಾಗಿ ಅಗ್ರಹಿಸಿದ್ದ ಜ.25ರಿಂದ ಅಹೋ ರಾತ್ರಿ ಧರಣಿ ನಡೆಸಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಮಟ್ಟ ಅತ್ಯಂತ ಕೆಳ ಹಂತದಲ್ಲಿದೆ. ಅನೇಕ ತಾಲೂಕುಗಳು ಶಿಕ್ಷಣದಲ್ಲಿ ಹಿಂದುಳಿದಿವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿಲ್ಲ. ಇದಕ್ಕೆ ಶಿಕ್ಷಕರ ಕೊರತೆಯೇ ಮೂಲ ಕಾರಣವಾಗಿದೆ” ಎಂದು ಹೇಳಿದ್ದಾರೆ.




