ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಅಭ್ಯರ್ಥಿ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಯಲ್ಲಿ ಎಸ್ ಡಿ ಪಿ ಐ ಅಭ್ಯರ್ಥಿ ಕಣಕ್ಕೆ ಇಳಿಯುವುದರೊಂದಿಗೆ ಒಟ್ಟು 14 ಅಲ್ಪಸಂಖ್ಯಾತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಕುತೂಹಲ ಕೆರಳಿಸಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಖ್ತರ್ ರಝಾ ಸರ್ಕಲ್‌ನಿಂದ ಎಸ್ ಟಿ ಪಿ ಐ ಕಾರ್ಯಕರ್ತರು ಮತ್ತು ಮುಖಂಡರು ಮೆರವಣಿಗೆ ಪ್ರಾರಂಭಿಸಿ ಪ್ರಮುಖ ಬೀದಿಗಳಲ್ಲಿ ಹಾದು ಮಹಾನಗರ ಪಾಲಿಕೆ ಆವರಣದ ಚುನಾವಣಾ ಕಚೇರಿಗೆ ತಲುಪಿ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು. ಈ ವೇಳೆ “ಸ್ವಾಭಿಮಾನದ ರಾಜಕೀಯಕ್ಕಾಗಿ ಒಂದಾಗೋಣ”, ಭಯ ಮುಕ್ತ ಸಮಾಜ ನಿರ್ಮಿಸೋಣ, ಕುಟುಂಬ ರಾಜಕಾರಣಕ್ಕೆ ತಿಲಾಂಜಲಿ ಹಾಡೋಣ” ಎಂಬ ಘೋಷಣೆಗಳು ಮೊಳಗಿದವು.

ದಾವಣಗೆರೆ ಉಪಚುನಾವಣೆಗೆ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಮುಸ್ಲಿಂ ಸಮುದಾಯ ತಮ್ಮ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಗೆ ಬೇಡಿಕೆ ಇಟ್ಟಿದ್ದರು. ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೇರಿದಂತೆ ವಿವಿಧ ಅಲ್ಪಸಂಖ್ಯಾತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ
ಮೆರವಣಿಗೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತಾಹೀರ್, ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಅಬ್ದುಲ್ ಹನ್ನನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಹಾಗೂ ರಾಜ್ಯ ಸಮಿತಿ ಸದಸ್ಯ ಫಯಾಜ್ ಅಹಮದ್ ಮತ್ತು ಅಬ್ರಾರ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





