ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಹಾಗೂ ಜೀವನದ ಗುಣಮಟ್ಟ ಸುಧಾರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು ಅನೇಕ ರೀತಿಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಮಹಿಳೆಯರ ಸಮೃದ್ಧಿ ಜೀವನಕ್ಕೆ ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ, ಮಾತನಾಡಿದ ಅವರು, ಸರಕಾರ ಮತ್ತು ನ್ಯಾಯಾಲಯ ನೀಡಿರುವ ಸೂಚನೆಯಂತೆ ಮಕ್ಕಳ ಕ್ಷೇತ್ರಗಳ ಕೆಲಸ ಮಾಡುವ ಎಲ್ಲ ಇಲಾಖೆಗಳು ಕೂಡಿಕೊಂಡು ನೂರು ದಿನಗಳ ಅರಿವು ಕಾರ್ಯಕ್ರಮಕ್ಕೆ ಕ್ರಿಯಾ ಯೋಜನೆ ರೂಪಿಸಿ, ಕ್ರಮವಹಿಸಬೇಕು. ಸಾರ್ವಜನಿಕರಲ್ಲಿ ಮಹಿಳೆ ಮತ್ತು ಮಕ್ಕಳ ಕುರಿತು ಅನುಷ್ಠಾನದಲ್ಲಿರುವ ಕಾಯ್ದೆ, ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲು ನೂರು ದಿನಗಳ ಅರಿವು ಕಾರ್ಯಕ್ರಮ ಸಹಾಯಕವಾಗಲಿದೆ ಎಂದು ಹೇಳಿದರು.
ಜಾನಪದ, ನಾಟಕ, ಸಂಗೀತ, ಕಿರು ಚಲನಚಿತ್ರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ವ್ಯಾಪಕ ಜನಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ ಎಂದು ಅವರು ತಿಳಿಸಿದರು.
ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಯಾವುದೋ ಸುಲಭದ ಜಾಗದಲ್ಲಿ ಕಾರ್ಯಕ್ರಮ ಮಾಡಿದರೆ, ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಬದಲಾಗಿ, ಯಾವ ಪ್ರದೇಶಗಳಲ್ಲಿ ಅಥವಾ ಯಾವ ಜನಾಂಗದ ವಾಸಸ್ಥಳಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆಯೋ ಅಲ್ಲಿಗೆ ತೆರಳಿ ಜಾಗೃತಿ ಮೂಡಿಸಬೇಕು. ಆಗ ಮಾತ್ರ ನಾವು ಮಾಡುವ ಕೆಲಸಕ್ಕೆ ಅರ್ಥ ಬರುತ್ತದೆ ಎಂದು ತಿಳಿಸಿದರು.
ಏಪ್ರಿಲ್ 2025 ರಿಂದ ನವೆಂಬರ 2025 ರ ಅವಧಿಯಲ್ಲಿ ಜಿಲ್ಲೆಯಲ್ಲಿನ 24 ಬಾಲ್ಯ ವಿವಾಹಗಳನ್ನು ತಡೆಯಲಾಗಿದ್ದು, ಮೂರು ಬಾಲ್ಯ ವಿವಾಹ ಆಗಿವೆ. ಈ ಮೂರು ಬಾಲ್ಯ ವಿವಾಹ ಜರುಗಲು ಕಾರಣಗಳ ಬಗ್ಗೆ ಅಧ್ಯಯನವಾಗಬೇಕು. ಮತ್ತು ಪರಿಹಾರ ಸೂಚಿಸಬೇಕು. ಬಾಲ್ಯ ವಿವಾಹಗಳನ್ನು ತಡೆದು, ಎಫ್‍ಐಆರ್ ದಾಖಲಿಸಿ, ಬಾಲ್ಯ ವಿವಾಹಕ್ಕೆ ಕಾರಣರಾದವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹ ತಡೆಗಟ್ಟುವುದು ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಎಂದು ಭಾವಿಸಿ ಸುಮ್ಮನಿರಬಾರದು. ಬಾಲ್ಯವಿವಾಹ ನಡೆಯುತ್ತಿರುವ ಮಾಹಿತಿ ಯಾರಿಗೆ ಮೊದಲು ತಿಳಿಯುತ್ತದೆಯೋ, ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮದುವೆ ತಡೆಯಲು ಮುಂದಾಗಬೇಕು ಎಂದು ಹೇಳಿದರು.
ಬಾಲ್ಯವಿವಾಹವನ್ನು ತಡೆಯುವ ಸಂದರ್ಭದಲ್ಲಿ ಅಥವಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸುವಾಗ ಮಾಹಿತಿ ನೀಡಿದವರಿಗೆ ಯಾವುದೇ ರೀತಿಯ ತೊಂದರೆಗಳಾದಲ್ಲಿ ಅಥವಾ ಬೆದರಿಕೆಗಳು ಬಂದಲ್ಲಿ ಭಯಪಡುವ ಅಗತ್ಯವಿಲ್ಲ. ಅಂತಹ ಸಂದರ್ಭಗಳಲ್ಲಿ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಧಾರವಾಡ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಕಂದಾಯ, ಪೊಲೀಸ್, ಪಂಚಾಯತರಾಜ್, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.
ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಏಕೀಕೃತ ಯೋಜನೆ ಆಗಿರುವ ಮಿಷನ್ ಶಕ್ತಿ – ಸಮಗ್ರ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಖಿ ಒನ್ ಸ್ಟಾಪ ಸೆಂಟರ್ ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ಬೇಟಿ ಬಚಾವೋ ಬೇಟಿ ಪಡಾವೋ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿ ಆಗಬೇಕೆಂದು ತಿಳಿಸಿದರು.
ಜಿಲ್ಲಾ, ತಾಲೂಕು ಮತ್ತು ಕ್ಷೇತ್ರಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ-2005, ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕಾಯ್ದೆ –2006 ಹಾಗೂ ಇತರ ಸುರಕ್ಷತಾ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಅವರು ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರವು ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷವಾಗಿ ಕಾರ್ಯಮಾಡುತ್ತಿದೆ. ಇಲಾಖಾ ಸಿಬ್ಬಂದಿ ಮತ್ತು ಅಧಿಕಾರಿಗಳಲ್ಲಿ ಕಾನೂನು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಇದನ್ನೂ ಓದಿ ಧಾರವಾಡ | ಮಕ್ಕಳ ಆತ್ಮವಿಶ್ವಾಸ ಬೆಳೆಸುವಲ್ಲಿ ನಾಟಕಗಳ ಪಾತ್ರ ಪ್ರಮುಖ: ಕೆ ಎಚ್ ನಾಯಕ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಎಚ್.ಎಚ್.ಕುಕನೂರ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಮಕ್ಕಳ ವಿವಿಧ ಕಾರ್ಯಕ್ರಮಗಳ ನಿರ್ವಾಹಕರು ಭಾಗವಹಿಸಿದ್ದರು.





