ಯಾವುದೇ ರೀತಿಯ ಒತ್ತಡಗಳಿಗೆ ಒಳಗಾಗದೆ, ಧಾರವಾಡ ಜಿಲ್ಲೆಯ ಇನಾಂವೀರಾಪೂರ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ದಲಿತ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮತ್ತು ಆರೋಪಿತರಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಪಾರದರ್ಶಕವಾಗಿ ಕೆಲಸ ಮಾಡಬೇಕೆಂದು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಜ. 09ರ ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ನಡೆದ ದೌರ್ಜನ್ಯ ಪ್ರಕರಣದ ಕುರಿತು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರೊಂದಿಗೆ ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿ, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಪೊಲೀಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ ಅವರು, ಯಾವುದೇ ರೀತಿಯ ಲೋಪವಾಗದಂತೆ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಹೇಳಿದರು.
ದಲಿತ ಸಮುದಾಯದ ಮೇಲೆ ನಡೆದಿರುವ ಈ ರೀತಿಯ ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ದೊರಕುವಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವಂತೆ, ಅಗತ್ಯವಿರುವ ಎಲ್ಲ ರೀತಿಯ ಸಹಾಯ ಹಾಗೂ ರಕ್ಷಣೆ ಒದಗಿಸಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಹಾಗೂ ಸಾಮಾಜಿಕ ಸೌಹಾರ್ದತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಕರಣಗಳು ಕಂಡುಬಂದಲ್ಲಿ, ಪೊಲೀಸ್ ಇಲಾಖೆಯು ಅವುಗಳನ್ನು ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳ ಬಗ್ಗೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿಯೂ ಹಾಗೂ ನಗರಗಳಲ್ಲಿಯೂ ಅಂತರ್ಜಾತಿ ವಿವಾಹಗಳ ಬಗ್ಗೆ ಜನರಿಗೆ ಅಗತ್ಯವಾದ ತಿಳುವಳಿಕೆ ನೀಡುವ ಮೂಲಕ ಜಾಗೃತಿ ಮೂಡಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾಡಳಿತವು ಸಮಗ್ರ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಡಾ. ಡಿ.ತಿಮ್ಮಯ್ಯ, ಹೇಮಲತಾ ನಾಯಕ, ಎಫ್.ಹೆಚ್.ಜಕ್ಕಪ್ಪನವರ, ಕೃಷ್ಣ ನಾಯಕ, ಡಾ. ಚಂದ್ರು ಲಮಾಣಿ, ಸಮೃದ್ಧಿ ವಿ.ಮಂಜುನಾಥ ಅವರು ಮಾತನಾಡಿದರು. ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಚರ್ಚಿಸಿ, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಪ್ರಕರಣಕ್ಕೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತವು ಕೈಗೊಂಡಿರುವ ಕ್ರಮಗಳು, ತನಿಖೆಯ ಪ್ರಗತಿ ಹಾಗೂ ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ನೆರವಿನ ಕುರಿತು ಮತ್ತು ಪರಿಹಾರದ ವಿವರಗಳನ್ನು ಸಮಗ್ರವಾಗಿ ವಿವರಿಸಿ, ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಪ್ರಕರಣದ ಹಿನ್ನೆಲೆ, ಆರೋಪಿಗಳ ಬಂಧನ, ಕಾನೂನು ಕ್ರಮಗಳು ಮತ್ತು ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ಭದ್ರತೆ ಕುರಿತು ವಿವರಿಸಿದರು. ವೇದಿಕೆಯಲ್ಲಿ ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯ ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಡಾ. ಡಿ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಸ್ವಾಗತಿಸಿದರು.
ಇದನ್ನೂ ಓದಿ ಹುಬ್ಬಳ್ಳಿ | ಮಹಿಳೆ ಮೇಲಿನ ಅತ್ಯಾಚಾರದ ವೀಡಿಯೋ ಪ್ರಕರಣ; ಮೂವರ ಬಂಧನ; ಕಮಿಷನರ್ ಹೇಳಿದ್ದೇನು?
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಬೆಳಗಾವಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಡಿವೈಎಸ್ಪಿ ವಿನೋದ ಮುಕ್ತೇದಾರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಸಿ., ಡಿಎಚ್‍ಓ ಡಾ.ಎಸ್.ಎಂ.ಹೊನಕೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅತೀಕಾ ಸಿದ್ದಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.





