ಓರ್ವ ವಿದ್ಯಾರ್ಥಿನಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಶಿವಗಿರಿಯಲ್ಲಿ ನಡೆದಿದೆ.
ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಸೇರಿದಂತೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿನಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸರ್ಕಾರಿ ಉದ್ಯೋಗ ಸಿಗದಿರುವುದು ಅಥವಾ ನೇಮಕಾತಿ ಪ್ರಕ್ರಿಯೆ ವಿಳಂಬವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬಂತೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಆಕೆಯ ಸಾವಿಗೂ ಉದ್ಯೋಗ ಸಂಬಂಧಿತ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯ ಜೇಬಿನಲ್ಲಿ ಎರಡು ಡೆತ್ ನೋಟ್‌ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಆಕೆ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿನಿ ಆತ್ಮಹತ್ಯೆಗೆ ಬೇರೆ ಬಣ್ಣ ಕಟ್ಟುವ ಕೆಲಸ ಮಾಡಬಾರದು ಎಂದಿದ್ದಾರೆ.
ಇದನ್ನೂ ಓದಿ ಧಾರವಾಡ | ‘ಜಾತ್ರೆ ತರುವಾಯ’ ಕೃತಿಯ ಅನ್ವಯಕ ವಿಮರ್ಶಾ ಲೇಖನಗಳ ಸಂಪಾದನೆ ಕೃತಿ ಬಿಡುಗಡೆ
ರೇಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ರೇಲ್ವೆ ಪೋಲಿಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿದ್ದಾರೆ.





