ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆಗೆ ಅರ್ಹ ಫಲಾನುಭವಿಗಳು ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿರುವ ಅವರು, “2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೊಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗುವುದು” ಎಂದು ಹೇಳಿದರು.
“ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 2024 ರಿಂದ ಯೋಜನೆ ಜಾರಿಗೊಳ್ಳಲಿದ್ದು, ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ. ಪಧವೀದರರಿಗೆ ₹3,000 ಮಾಸಿಕ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ₹1,500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ್ ಜೋಡಣೆಯ ಅಭ್ಯರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಯುವ ನಿಧಿ ನೋಂದಣಿಗೆ ಚಾಲನೆ:
ಡಿಸೆಂಬರ್ 26ರ ಮಂಗಳವಾರ ಯುವನಿಧಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿಗಳ ಘನ ಉಪಸ್ಥಿತಿಯಲ್ಲಿ ಹಾಗೂ ಇತರೆ ಎಲ್ಲ ಸಚಿವ ಸಂಪುಟದ ಸಚಿವರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು ಮತ್ತು ಇತರೆ ಗಣ್ಯರ ಉಪಸ್ಥಿತಿಯಲ್ಲಿ ನೋಂದಣಿ ಪ್ರಕಿಯೆ ಚಾಲನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮಕ್ಕಳ ಕಲಿಕೆಗೆ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ: ಸಿಆರ್‌ಪಿ ಜಿ ಗುಂಡೂರಾವ್
ನೋಂದಣಿ ಪ್ರಕ್ರಿಯೆ:
ಅರ್ಹ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ನೋಂದಣಿ ಮಾಡಬಹುದು.
ಇದಲ್ಲದೇ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು.





