ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕಗೊಳಿಸಿ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ಶಿಫಾರಸ್ಸಿನ ಮೇರೆಗೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಜನಾಬ್ ಅಬ್ದುಲ್ ಜಬ್ಬಾರ್ ಸಾಹೇಬ್ ಅವರ ಆದೇಶದಂತೆ ಈ ನೇಮಕಾತಿ ಮಾಡಲಾಗಿದೆ.
ಆದೇಶದಲ್ಲಿ, ಹಮ್ಮದ್ ಇಬ್ರಾಹಿಂ ಸಾಹೇಬ್ ಅವರು ತಕ್ಷಣವೇ ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ, ಪಕ್ಷ ಸಂಘಟನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರಿಗೆ ನೇಮಕಾತಿ ಆದೇಶವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಮ್ಮದ್ ಇಬ್ರಾಹಿಂ ಸಾಹೇಬ್ ಅವರು ಜಿಲ್ಲಾ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದು, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ನಂತರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪದೋನ್ನತಿ ಹೊಂದಿದ್ದರು. ಇದೀಗ ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.





