ಶಾಲೆಯ ವಾಹನ ಚಾಲಕನೊಬ್ಬ ಅದೇ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲೆಯ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ ಆರೋಪಿ, 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಚಾಕೋಲೆಟ್ ಕೊಡುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೆದರಿ ಬಾಲಕಿ ಸುಮ್ಮನಾಗಿದ್ದಾಳೆ. ಮೂರು ದಿನಗಳ ಹಿಂದೆ ನಡೆದ ಕ್ರೀಡಾಕೂಟದಲ್ಲಿ ಬಾಲಕಿ ಓಟ ಸ್ಪರ್ಧೆಯಲ್ಲಿ ಭಾಗವಹಿಸಿದಾಗ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದೆ. 8 ತಿಂಗಳಿನಿಂದ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಗರ್ಭಿಣಿಯಾದರೂ ಶಾಲಾ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಸಂಶಯ ಬಾರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಳಲೂರು ಏತ ನೀರಾವರಿ ಯೋಜನೆಗೆ ಭೂಮಿ ವಶ; ಪರಿಹಾರಕ್ಕಾಗಿ ರೈತರ ಅಲೆದಾಟ.
ಆರೋಪಿ ರಂಜಿತ್ ಬಿಎಸ್‌ಸಿ ಪದವೀಧರೆ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೂ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪ್ರಾಪ್ತೆ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.





