ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಹಾಸನ ತಾಲೂಕಿನ ಬ್ರಹ್ಮದೇವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ, ಎಐಡಿಎಸ್‌ಓ (AIDSO) ಹಾಸನ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷೆ ಚೈತ್ರಾ ಅವರು, ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುವ ಮೂಲಕ ಬಡ, ರೈತ ಹಾಗೂ ಕೂಲಿ ಕಾರ್ಮಿಕರ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ, ಸಾರ್ವಜನಿಕ ಶಿಕ್ಷಣವನ್ನು ಖಾಸಗೀಕರಣ ಮಾಡುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಬ್ರಹ್ಮದೇವರಹಳ್ಳಿ ಶಾಲೆಯಲ್ಲಿ ಪ್ರಸ್ತುತ 11 ವಿದ್ಯಾರ್ಥಿಗಳು ಓದುತ್ತಿದ್ದು, ಅವರ ಪೋಷಕರು ಕಾರ್ಖಾನೆ ಮತ್ತು ದಿನಗೂಲಿ ತೆರಳುವವರಾಗಿದ್ದಾರೆ. ಕೆಲಸಗಳಿಗೆ ಇಂತಹ ಪರಿಸ್ಥಿತಿಯಲ್ಲಿ ಶಾಲೆ ಮುಚ್ಚಿದರೆ ಮಕ್ಕಳು ದೂರದ ಊರಿಗೆ ಹೋಗಿ ಓದುವುದು ಅಸಾಧ್ಯವಾಗುತ್ತದೆ. ಬಸ್ ವ್ಯವಸ್ಥೆ ಕಲ್ಪಿಸಿದರೂ ಮಕ್ಕಳ ಸುರಕ್ಷತೆಯ ಹೊಣೆ ಯಾರು ಹೊರುತ್ತಾರೆ? ಎಂದು ಅವರು ಪ್ರಶ್ನಿಸಿದರು.
ರಾಜ್ಯದಲ್ಲಿ 21 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಟ್ಟಡಗಳು ದುರಸ್ತಿಗಾಗಿ ವರ್ಷಗಳಿಂದ ಕಾಯುತ್ತಿವೆ, 3,500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯಗಳಿಲ್ಲ, ಹಾಗೂ 1,000ಕ್ಕೂ ಹೆಚ್ಚು ಶಾಲೆಗಳಲ್ಲಿ ವಿದ್ಯುತ್ ಸೌಲಭ್ಯವೇ ಇಲ್ಲ. ಅನೇಕ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಇಂತಹ ಮೂಲಭೂತ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸದೇ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ ಎಂದು ಚೈತ್ರಾ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಬಾಲ್ಯ ವಿವಾಹ, ಬಾಲ ಗರ್ಭಾವಸ್ಥೆ ವಿರುದ್ಧ ಜಾಗೃತಿ: ಕಿರುನಾಟಕ
ಶಾಲೆಯನ್ನು ಮುಚ್ಚುವ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಬ್ರಹ್ಮದೇವರಹಳ್ಳಿ ಸರ್ಕಾರಿ ಶಾಲೆಯನ್ನು ಉಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಸುನಿಲ್, ಮಂಜು, ಪುನೀತ್, ಜಾನಕಿ, ಭರತ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.





