ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ, ಸಂಚಾರಿ ಪೀಠ ಸ್ಥಾಪಿಸುವ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ, ವಕೀಲರ ನಿಯೋಗವು ಭೇಟಿ ಮಾಡಿತ್ತು. ಈ ವೇಳೆ ಸಿಎಂ ಮಾತುಕತೆ ನಡೆಸುತ್ತಾ, ಭರವಸೆ ನೀಡಿದರು.
ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪ ನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕರು ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರಾವಳಿ ಭಾಗದ ಜನರಿಗೆ ಕ್ಷಿಪ್ರಗತಿ ಯಲ್ಲಿ ನ್ಯಾಯ ದೊರೆಯುವಂತಾಗಲು ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಯವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಅವರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅವರು ಆಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಡಿಸೆಂಬರ್ 13 ಮತ್ತು 14 ರಂದು ಪಣಂಬೂರು ಎನ್ ಎಂ ಪಿ ಟಿ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ವಕೀಲರ ಕ್ರಿಕೆಟ್ ಹಾಗೂ ಥ್ರೋ ಬಾಲ್ ಪಂದ್ಯಾಟದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಪ್ರಧಾನ ಸರಕಾರಿ ಅಭಿಯೋಜಕ ರಾದ ಎಂ.ಪಿ. ನರೋನ್, ಟಿ.ಎನ್.ಪೂಜಾರಿ, ಎಂ.ಆರ್. ಬಲ್ಲಾಳ್, ಎಂ.ಯಶವಂತ ಮರೋಳಿ, ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಜೊತೆ ಕಾರ್ಯ ದರ್ಶಿ ಜ್ಯೋತಿ, ದ.ಕ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಡಿಕೋಸ್ಟ ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ವಕೀಲರಾದ ಸುಮನಾ ಶರಣ್, ಶಾಲಿನಿ, ಮುಹಮ್ಮದ್ ಅಸ್ಕರ್, ನೂರುದ್ದೀನ್ ಸಾಲ್ಮರ ಹಾಗೂ ದ.ಕ. ಜಿಲ್ಲಾ ಹಾಗೂ ಕರಾವಳಿ ಭಾಗದ ವಕೀಲರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.





