ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನೌಕರರೊಬ್ಬರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನನೊಂದು, ಆಸ್ಪತ್ರೆಯ ಮುಂಭಾಗದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಅನಾಹುತ ತಪ್ಪಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು ಹನುಮಂತ ಛಲವಾದಿ ಎಂದು ಗುರುತಿಸಲಾಗಿದ್ದು, ಕಳೆದ 14 ವರ್ಷಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಆಸ್ಪತ್ರೆಯ ಆಡಳಿತ ಮಂಡಳಿಯು ಯಾವುದೇ ಪೂರ್ವಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಿದೆ ಎನ್ನಲಾಗಿದೆ. ಉದ್ಯೋಗ ಕಳೆದುಕೊಂಡಿದ್ದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಹನುಮಂತ, ಬುಧವಾರ ಮಧ್ಯಾಹ್ನ ಕಿಮ್ಸ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಏಕಾಏಕಿ ಜೊತೆಗೆ ತಂದಿದ್ದ ಡೀಸೆಲ್ ಮೈಮೇಲೆ ಸುರಿದುಕೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ಧಿ ಓದಿದ್ದೀರಾ? ಧಾರವಾಡ | ತಳ ಸಮುದಾಯಗಳು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಬೆಳೆಯಬೇಕು: ಎಫ್.ಎಚ್.ಜಕ್ಕಪ್ಪನವರ
ಹನುಮಂತ ಛಲವಾದಿ ಆತ್ಮಹತ್ಯೆಗೆ ಮುಂದಾಗುತ್ತಿದ್ದಂತೆ, ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಕರ್ತವ್ಯ ನಿರತರಾಗಿದ್ದ ಆಸ್ಪತ್ರೆ ಭದ್ರತಾ ಸಿಬ್ಬಂದಿ ತಕ್ಷಣ ಆತ್ಮಹತ್ಯೆ ಯತ್ನವನ್ನು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದಾಗಿ ಆಸ್ಪತ್ರೆ ಮುಂಭಾಗದಲ್ಲಿ ಕೆಲಕಾಲ ತೀವ್ರ ಗೊಂದಲದ ವಾತಾವರಣ ಉಂಟಾಗಿತ್ತು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಹನುಮಂತ ಅವರನ್ನು ವಶಕ್ಕೆ ಪಡೆದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಗುತ್ತಿಗೆ ನೌಕರರನ್ನು ಏಕಾಏಕಿ ತೆಗೆದುಹಾಕಿರುವ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ನೌಕರರ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.





