13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿ ಬಾಲಕರು 14ರಿಂದ15 ವರ್ಷ ವಯಸ್ಸಿನವರು ಎಂದು ಹೇಳಲಾಗಿದೆ.
ಬಾಲಕಿಯ ಪೋಷಕರು ಮನೆಯಲ್ಲಿಲ್ಲದಿದ್ದಾಗ, ಮನೆಗೆ ನುಗ್ಗಿದ ಆರೋಪಿ ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿಗೆ ರಕ್ಷಣೆ ನೀಡಲಾಗಿದೆ. ಆರೋಪಿ ಬಾಲಕರನ್ನು ಬಂಧಿಸಿ, ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ತಿಳಿಸಿದ್ದಾರೆ.
“ಆರೋಪಿಗಳಲ್ಲಿ ಒಬ್ಬ ಬಾಲಕ ಪ್ರೌಢಶಾಲೆಯಲ್ಲಿ ಓದುತ್ತಿದ್ದಾನೆ. ಮತ್ತೊಬ್ಬ ಹುಡುಗ ಶಾಲೆ ಬಿಟ್ಟಿದ್ದಾನೆ” ಎಂದು ಅವರು ಹೇಳಿದ್ದಾರೆ.
“ಬಾಲಕರು ತಮ್ಮ ಕೃತ್ಯನ್ನು ವಿಡಿಯೋ ಮಾಡಿಕೊಂಡಿದ್ದೇವೆಂದು ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಮೊಬೈಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.




