ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಕಲಬುರಗಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ದಸಂಸ ರಾಜ್ಯ ಸಮಿತಿ ಸದಸ್ಯ ಅರ್ಜುನ ಗೊಬ್ಬರಕರ ಮಾತನಾಡಿ, ‘ದೇಶದಲ್ಲಿ ಕೋಮು ದ್ವೇಷ ಹಬ್ಬಿಸುವ ನೋಂದಣಿ ಇಲ್ಲದ ಆರ್.ಎಸ್.ಎಸ್ ಸಂಘಟನೆಯನ್ನು ಸರ್ಕಾರ ತಕ್ಷಣವೇ ರದ್ದುಗೊಳಿಸಬೇಕು,’ ಎಂದು ಆಗ್ರಹಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಚಿತ್ತಾಪುರದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದರು.
‘ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನನ್ನು ಕೂಡ ಬಂಧಿಸಬೇಕು,’ ಎಂದು ಅವರು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಆರ್‌ಎಸ್‌ಎಸ್ ಕುತಂತ್ರದ ವಿರುದ್ಧ ಜೇವರ್ಗಿಯಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರತಿಭಟನೆ
‘ಗುಲ್ಬರ್ಗಾ ವಿವಿಗೆ ಅಂಬೇಡ್ಕರ್ ಅವರ ಹೆಸರಿಡಲು ದಸಂಸ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿದೆ. ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳಿಗೆ ಮಹಾನಾಯಕರ ಹೆಸರಿಡಲು ನಿರ್ಧರಿಸಿರುವುದು ಸ್ವಾಗತಾರ್ಹ,’ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆಯಲ್ಲಿ ಶ್ರೀನಿವಾಸ ಖೇಳಗಿ, ಸಂಜೀವಕುಮಾರ ಜವಳಕರ, ಗೋಪಾಲ ರಾಂಪೂರೆ, ಬಾಬುರಾವ ಶೆಳಗಿ, ವಿಜಯಕುಮಾರ ಸಜ್ಜನ, ಕಪಿಲ ಸಿಂಗೆ ಸೇರಿದಂತೆ ಹಲವರು ಭಾಗವಹಿಸಿದ್ದರು.





