ನಗರದ ಹಳೆಯ ಜೇವರ್ಗಿ ರಸ್ತೆಯಲ್ಲಿರುವ ಪಾಳುಬಿದ್ದ ಉದ್ಯಾನದಲ್ಲಿ ಮಂಗಳವಾರ ತಡರಾತ್ರಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಹಮಾಲವಾಡಿ ಅಪ್ಪರ್ ಲೈನ್ ಪ್ರದೇಶದ ನಿವಾಸಿ ಸೈಯದ್ ಮೆಹಬೂಬ್ (23) ಕೊಲೆಯಾದ ಯುವಕನಾಗಿದ್ದಾನೆ.
ಘಟನೆಯ ಮಾಹಿತಿ ಪಡೆದ ತಕ್ಷಣ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಎಸಿಪಿ ಶರಣಬಸಪ್ಪ ಸುಬೇದಾರ, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗುರು ಪಾಟೀಲ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗೆ ಶ್ವಾನ ದಳದ ಸಹಾಯದಿಂದ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ಮಾತನಾಡಿ, ‘ಜನರ ಓಡಾಟ ಕಡಿಮೆ ಇರುವ ಉದ್ಯಾನದಲ್ಲಿ ಈ ಕೊಲೆ ನಡೆದಿದೆ. ಕೆಲ ದಿನಗಳ ಹಿಂದೆ ಮೃತ ಯುವಕ ತನ್ನ ಸ್ನೇಹಿತರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಮಾಹಿತಿ ಲಭ್ಯವಾಗಿದೆ. ಅದೇ ವೈಷಮ್ಯದಿಂದ ಪರಿಚಿತರಿಂದಲೇ ಹತ್ಯೆ ನಡೆದಿರುವ ಸಾಧ್ಯತೆ ಇದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ನಿಖರ ಕಾರಣ ತಿಳಿಯಲಿದೆ’ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಮಹಾನ್ ಯೋಗಿ ವೇಮನರ ಜಯಂತಿ ಆಚರಣೆ
‘ಮೃತ ಯುವಕ ಮನೆಗೆ ಅಪರೂಪವಾಗಿ ಬರುತ್ತಿದ್ದನೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಲ್ಲದೆ, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಎರಡು ಹಳೆಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರೌಡಿಶೀಟರ್‌ಗಳ ಪಾತ್ರವಿದೆಯೇ ಎಂಬುದೂ ಸೇರಿದಂತೆ ಎಲ್ಲ ಆಯಾಮಗಳಿಂದ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





