ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆಗೆ ಸೇರಿದ ಸಾರಿಗೆ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಬಸ್ ಬಹುತೇಕ ಸುಟ್ಟುಹೋಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.
ಮದರಿ ಗ್ರಾಮದಿಂದ ಜೇವರ್ಗಿ ಕಡೆಗೆ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಬಸ್‌ನ ಇಂಜಿನ್ ಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸುವ ಮೂಲಕ ಚಾಣಾಕ್ಷ್ಯ ಪ್ರದರ್ಶಿಸಿದರು. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಸ್ವಚ್ಛತೆ; ಸ್ವಚ್ಛತೆಗೆ ಕರ್ನಾಟಕ ಸೇನೆ ಆಗ್ರಹ
ಪ್ರಾಥಮಿಕ ಮಾಹಿತಿ ಪ್ರಕಾರ ಶಾಟ್ ಸರ್ಕ್ಯೂಟ್‌ನಿಂದ ಬಸ್‌ಗೆ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯರು ತಕ್ಷಣವೇ ನೀರು ಸುರಿದು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಸುಟ್ಟುಹೋದ ಬಸ್ ಜೇವರ್ಗಿ ಡಿಪೋಗೆ ಸೇರಿದ್ದಾಗಿದೆ. ಈ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





