ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಬಂಧದ ಪ್ರಮುಖ ಬೇಡಿಕೆಗಳನ್ನು 2026ರ ರಾಜ್ಯ ಬಜೆಟ್‌ನಲ್ಲಿ ಪರಿಗಣಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಜಿಲ್ಲಾಧ್ಯಕ್ಷೆ ಸೀಮಾ ದೇಶಪಾಂಡೆ ತಿಳಿಸಿದರು.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ದೇಶದಾದ್ಯಂತ ಮಹಿಳೆಯರ ಹಕ್ಕುಗಳ ರಕ್ಷಣೆ ಹಾಗೂ ಅವರ ಮೇಲಿನ ಅಪರಾಧಗಳನ್ನು ತಡೆಯುವ ಉದ್ದೇಶದಿಂದ ಸಂಘಟನೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಬಾಲ್ಯ ವಿವಾಹ, ಸ್ತ್ರೀ ಭ್ರೂಣ ಹತ್ಯೆ, ವರದಕ್ಷಿಣೆ ಕೊಲೆ, ಲಿಂಗ ತಾರತಮ್ಯ, ಮರ್ಯಾದಾಗೇಡು ಹತ್ಯೆ, ಕೌಟುಂಬಿಕ ದೌರ್ಜನ್ಯ ಸೇರಿದಂತೆ ಮಹಿಳೆಯರ ಅನೇಕ ಜ್ವಲಂತ ಸಮಸ್ಯೆಗಳ ವಿರುದ್ಧ ಸಂಘಟನೆ ಹೋರಾಟ ನಡೆಸುತ್ತಿದೆ’ ಎಂದು ತಿಳಿಸಿದರು.
ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಗುಂಪು ಅತ್ಯಾಚಾರ, ಕೊಲೆ, ಆಸಿಡ್ ದಾಳಿ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದರು. ಲಭ್ಯ ಅಂಕಿ-ಅಂಶಗಳ ಪ್ರಕಾರ 2023ರಲ್ಲಿ 600 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ 739 ಪ್ರಕರಣಗಳು ದಾಖಲಾಗಿವೆ. 2025ರ ಜುಲೈವರೆಗೆ ಕೇವಲ ಏಳು ತಿಂಗಳಲ್ಲಿ 547 ಪ್ರಕರಣಗಳು ದಾಖಲಾಗಿವೆ. ಅಲ್ಲದೆ ನಾಲ್ಕು ತಿಂಗಳಲ್ಲೇ 979 ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದರು.
‘ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 43 ಸಾವಿರಕ್ಕೂ ಹೆಚ್ಚು ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪೋಕ್ಸೋ ಪ್ರಕರಣಗಳು ಶೇಕಡಾ 26ರಷ್ಟು ಹೆಚ್ಚಳ ಕಂಡಿವೆ. ಆದರೆ ದಾಖಲಾಗಿರುವ ಪ್ರಕರಣಗಳಲ್ಲಿ ಬಹುತೇಕವು ಖುಲಾಸೆಯಾಗುತ್ತಿರುವುದು ಕಾನೂನು ಜಾರಿಯ ದೌರ್ಬಲ್ಯವನ್ನು ತೋರಿಸುತ್ತದೆ’ ಎಂದು ಅವರು ಆಕ್ಷೇಪಿಸಿದರು.
‘ಇದೇ ವೇಳೆ ರಾಜ್ಯದಲ್ಲಿ ಬಾಲ್ಯವಿವಾಹ ಹಾಗೂ ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಿದರು. ಆರ್‌ಸಿಎಚ್ ಪೋರ್ಟಲ್ ಅಂಕಿ-ಅಂಶಗಳ ಪ್ರಕಾರ 2023–24ರ ಜುಲೈವರೆಗೆ ರಾಜ್ಯದಲ್ಲಿ 80,813 ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರು ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆಗಳು ಸಮಾಜವನ್ನು ಬೆಚ್ಚಿಬೀಳಿಸುವಂತಿವೆ’ ಎಂದು ಹೇಳಿದರು.
‘ಈ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮರ್ಯಾದಾಗೇಡು ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆ ಜಾರಿಗೊಳಿಸಬೇಕು. ಬಾಲ್ಯ ವಿವಾಹ ಮತ್ತು ಸ್ತ್ರೀ ಭ್ರೂಣ ಹತ್ಯೆ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು, ಅಶ್ಲೀಲತೆಯ ಪ್ರಚಾರ ಹಾಗೂ ಮದ್ಯ–ಮಾದಕ ವಸ್ತುಗಳ ಹಾವಳಿಯನ್ನು ನಿಯಂತ್ರಿಸುವುದೂ ಅಗತ್ಯವಾಗಿದೆ’ ಎಂದು ಅವರು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ರೈತನ ಮದುವೆಯಾಗುವ ವಧು ಹೆಸರಲ್ಲಿ ₹10 ಲಕ್ಷ ಠೇವಣಿ ಯೋಜನೆಗೆ ಒತ್ತಾಯ
ಮಹಿಳೆಯರ ಉದ್ಯೋಗ ಭದ್ರತೆ, ಆರೋಗ್ಯ ಸೌಲಭ್ಯ, ಶಿಶುಪಾಲನಾ ಕೇಂದ್ರಗಳಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣಿಕೆಯನ್ನು ತಡೆಗಟ್ಟುವುದು ಹಾಗೂ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವಂತೆ ಅವರು ಸರ್ಕಾರವನ್ನು ಆಗ್ರಹಿಸಿದರು.





