ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಹಾಗೂ ದಲಿತ ಸಮುದಾಯವನ್ನು ಅತ್ಯಂತ ಕೆಟ್ಟ ಪದಗಳು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ‘ಗುಲಾಮರ ಅಪ್ಪ’ ಎಂಬ ಹೆಸರಿನ ಫೇಸ್‌ಬುಕ್ ಖಾತೆ ನಡೆಸುತ್ತಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೆಂದು ಸಮಾಜ ಕಾರ್ಯಕರ್ತ ದಿನೇಶ್ ಸುತಾರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಪತ್ರಿಕಾ ಪ್ರಕಟಣೆ ಹೋರಡಿಸಿ ಮಾತನಾಡಿದ ಅವರು’ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೋಸ್ಟ್‌ಗಳ ಮೂಲಕ ಡಾ. ಅಂಬೇಡ್ಕರ್ ಅವರ ವ್ಯಕ್ತಿತ್ವಕ್ಕೆ ಅವಮಾನ ಮಾಡಲಾಗಿದ್ದು, ದಲಿತ ಸಮುದಾಯದ ಭಾವನೆಗಳಿಗೆ ತೀವ್ರ ಧಕ್ಕೆ ಉಂಟಾಗಿದೆ. ಇದರಿಂದ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಹರಡುವ ಅಪಾಯವಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಜ್ಯದಲ್ಲಿ ದಲಿತರ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿಯಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ. ಮಹಾದೇವಪ್ಪ ಅವರು ಈ ವಿಚಾರದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂಬ ಆರೋಪವೂ ಕೇಳಿಬಂದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಸಭೆಯಲ್ಲೇ ಸಿಬ್ಬಂದಿಗಳ ಬಳಿ ಲಂಚಕ್ಕೆ ಬೇಡಿಕೆ; ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ
‘ಸಂವಿಧಾನ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ರಕ್ಷಿಸುವ ದೃಷ್ಟಿಯಿಂದ, ಇಂತಹ ದ್ವೇಷಪೂರಿತ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ತಕ್ಷಣ ಅವರನ್ನು ಬಂಧನ ಮಾಡಬೇಕೆಂದು’ ಅವರು ಒತ್ತಾಯಿಸಿದರು.
ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಮಾಜ ಸೇವಕ ದಿನೇಶ್ ಸುತಾರ ಅವರು ಆಗ್ರಹಿಸಿದ್ದಾರೆ.





