ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಶನಿವಾರ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ತಿಳಿದು ಬಂದಿದೆ.
ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜೀರ್ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಆರೋಪಿಯಾಗಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದ್ದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಆದೇಶ ಪ್ರತಿಯನ್ನು ನೀಡುವ ಸಲುವಾಗಿ ಫಲಾನುಭವಿಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಎಫ್‌ಡಿಎ ಶಶಿಕಾಂತ್ ಮೇಲಿದ್ದು, ಹಣ ನೀಡುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದರಿಂದ ಕಿಶನ್ ರಾಠೋಡ್ ಎಂಬವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ಯಾದಗಿರಿ | ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತನ ಮೇಲೆ ಪೊಲೀಸರ ಹಲ್ಲೆ ಆರೋಪ
‘ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ತನಿಖಾಧಿಕಾರಿ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಲಂಚ ಪಡೆಯುತ್ತಿದ್ದ ಎಫ್‌ಡಿಎ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.





