ನಗರದ ರಾಜಾಪುರ ಸಮೀಪದ ಮರಗಮ್ಮ ಗುಡಿ ಬಳಿ ಇರುವ ಮನೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತನನ್ನು ಶ್ರೀರಾಮ ಪಾಟೀಲ (16) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶ್ರೀರಾಮ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದನು. ಮೃತನ ತಂದೆ ಸುಖಶೀಲ ಪಾಟೀಲ ಅವರು ಕಿರಾಣಿ ಅಂಗಡಿ ನಡೆಸುತ್ತಿದ್ದು, ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜನವರಿ 12ರಂದು ರಾತ್ರಿ ಸುಮಾರು 9 ಗಂಟೆಗೆ ಸುಖಶೀಲ ಪಾಟೀಲ ಅವರು ಅಂಗಡಿಯಿಂದ ಮನೆಗೆ ಬಂದು ದಿನಸಿ ಸಾಮಾನು ಇಟ್ಟಿದ್ದರು. ನಂತರ ರಾತ್ರಿ 9.30ರ ಸುಮಾರಿಗೆ ಅವರು ಹಾಗೂ ಅವರ ಪತ್ನಿ ಅಂಗಡಿ ಮುಚ್ಚಿಕೊಂಡು ಮನೆಗೆ ಬಂದಾಗ ಮನೆ ಒಳಗಿನಿಂದ ಲಾಕ್ ಆಗಿತ್ತು. ಮಗನನ್ನು ಕರೆದು ಕೂಗಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಆತಂಕಗೊಂಡು ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ, ಶ್ರೀರಾಮ ಸೀರೆಯಿಂದ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗೆ ₹1.50 ಲಕ್ಷ ದಂಡ!
ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.





