ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋವಾ ಗಡಿಭಾಗದ ಸದಾಶಿವಗಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಗುಂಪೊಂದು ಅಮಾನವೀಯವಾಗಿ ವರ್ತಿಸಿದೆ. ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿರುವುದಲ್ಲದೆ, ವಿದ್ಯಾರ್ಥಿಗಳು ಬಳಸುವ ಕುಡಿಯುವ ನೀರಿನ ಟ್ಯಾಂಕ್‌ಗೆ ಮೂತ್ರ ವಿಸರ್ಜಿಸುವ ಮೂಲಕ ವಿಕೃತಿ ಮೆರೆದಿದ್ದಾರೆ.
ಘಟನೆಯ ಹಿನ್ನೆಲೆ: ಚಿತ್ತಾಕುಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಈ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಮಾಜಿ ಉಪಾಧ್ಯಕ್ಷ ಸೂರಜ್ ದೇಸಾಯಿ ಹಾಗೂ ಮಾಜಿ ಅಧ್ಯಕ್ಷ ನಿತಿನ್ ಬಾಂದೇಕರ್ ನೇತೃತ್ವದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಈ ಕ್ರೀಡಾಕೂಟಕ್ಕೆ ಆಗಮಿಸಿದ್ದ ಕೆಲವು ಕಿಡಿಗೇಡಿಗಳು ಶಾಲಾ ಕೊಠಡಿಗಳ ಬಳಿ ನುಗ್ಗಿ ಮದ್ಯ, ಸಿಗರೇಟ್ ಹಾಗೂ ಗುಟ್ಕಾ ಸೇವಿಸಿ ಎಲ್ಲೆಂದರಲ್ಲಿ ಗಲೀಜು ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅಕ್ಷರ ದಾಸೋಹ ಹಾಗೂ ಕುಡಿಯಲು ಬಳಸುವ ನೀರಿನ ತೊಟ್ಟಿಗೆ ಮೂತ್ರ ವಿಸರ್ಜನೆ ಮಾಡಿರುವುದು ಪೋಷಕರು ಹಾಗೂ ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮರುದಿನ ಶಾಲೆಗೆ ಬಂದ ವಿದ್ಯಾರ್ಥಿಗಳೇ ಈ ಅಶುಚಿಯನ್ನು ಕಂಡು ಸ್ವಚ್ಛಗೊಳಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಗೆ ದೂರು ನೀಡಲು ಹೋದ ಶಿಕ್ಷಕರು ಹಾಗೂ ಮಕ್ಕಳಿಗೆ ಸ್ಥಳೀಯ ಮಾಜಿ ಪಂಚಾಯ್ತಿ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಶಾಲಾ ಮಂಡಳಿಯ ಅನುಮತಿ ಪಡೆಯದೆಯೇ ಪದೇ ಪದೇ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸಿ, ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲಾಗುತ್ತಿದೆ ಎಂದು ಎಸ್‌ಡಿಎಂಸಿ ಸದಸ್ಯರು ದೂರುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | 112 ಸಿಬ್ಬಂದಿಯ ಸಮಯಪ್ರಜ್ಞೆ; ತಪ್ಪಿದ ಭಾರಿ ಅನಾಹುತ
ಗಡಿಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿಕೊಂಡು ಬಂದಿರುವ ಏಕೈಕ ಶಾಲೆಯ ಮೇಲೆ ಉದ್ದೇಶಪೂರ್ವಕವಾಗಿ ಈ ತರ ಕೃತ್ಯಗಳು ನಡೆಯುತ್ತಿವಿಯಾ ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳೀಯ ಕನ್ನಡ ವಿರೋಧಿ ಶಕ್ತಿಗಳು ಈ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿವೆ ಎಂಬ ಗಂಭೀರ ಮಾತುಗಳು ಕೇಳಿಬರುತ್ತಿವೆ.
ಈ ಘಟನೆಯನ್ನು ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ “ಕನ್ನಡ ಶಾಲೆಯ ಮೇಲೆ ನಡೆಯುತ್ತಿರುವ ಈ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಸಂಘಟನೆಗಳು ಎಚ್ಚರಿಸಿವೆ.





