ಕಾರವಾರ: ನಗರದ ಹೊರವಲಯದ ಶಿರವಾಡದಲ್ಲಿರುವ ಕಾರವಾರ ನಗರಸಭೆಯ (ಸಿಎಂಸಿ) ತ್ಯಾಜ್ಯ ವಿಲೇವಾರಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯ ಭಸ್ಮವಾಗಿದೆ.
ಬೆಂಕಿಯ ಜ್ವಾಲೆ ಹಾಗೂ ದಟ್ಟವಾದ ಹೊಗೆಯಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ಭೀತಿಗೊಳಗಾದ ಘಟನೆ ನಡೆದಿದೆ. ಶುಕ್ರವಾರ ಬೆಳಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ಡಂಪಿಂಗ್ ಯಾರ್ಡ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿ ಸಂಗ್ರಹವಾಗಿದ್ದ ಒಣ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ತಗುಲಿದ ಪರಿಣಾಮ, ಅದು ಕ್ಷಣಾರ್ಧದಲ್ಲಿ ಇಡೀ ಆವರಣಕ್ಕೆ ವ್ಯಾಪಿಸಿತು.
ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಹಲವು ಕಿಲೋಮೀಟರ್ ದೂರದವರೆಗೆ ದಟ್ಟವಾದ ಕಪ್ಪು ಹೊಗೆ ಆವರಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು.
ಬೆಂಕಿ ನಿಯಂತ್ರಣಕ್ಕೆ ಬಾರದ ಕಾರಣ ಅಂಕೋಲಾ ಹಾಗೂ ಗ್ರಾಸಿಮ್ ಇಂಡಸ್ಟ್ರೀಸ್‌ನಿಂದ ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ಕರೆಸಿಕೊಳ್ಳಲಾಯಿತು. ನಗರಸಭೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು.
ಈ ಕುರಿತು ಮಾಹಿತಿ ನೀಡಿರುವ ಸಿಎಂಸಿ ಆಯುಕ್ತ ಜಗದೀಶ್ ಹುಲಿಗಜ್ಜಿ ಅವರು, ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಿದ್ದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸದ್ಯ ಬೆಂಕಿಯನ್ನು ಬಹುತೇಕ ಹತೋಟಿಗೆ ತರಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿರಸಿ | ಕೊಲೆ ಯತ್ನ ಹಾಗೂ ಕೊಲೆ ಪ್ರಕರಣ: ಆರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಅಥವಾ ಯಾರೋ ಹಚ್ಚಿದ ಸಣ್ಣ ಬೆಂಕಿ ಇಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಶಿರವಾಡದ ಈ ಡಂಪಿಂಗ್ ಯಾರ್ಡ್ ಮೊದಲಿನಿಂದಲೂ ವಿವಾದದ ಕೇಂದ್ರವಾಗಿದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗ ಸಂಭವಿಸಿರುವ ಬೆಂಕಿ ಅವಘಡವು ಜನರ ಆತಂಕವನ್ನು ಇಮ್ಮಡಿಗೊಳಿಸಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹ ಕೇಳಿಬರುತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.





