ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ‘ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 26 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ‘ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ ಎಲ್ಲರೂ ಎಚ್ಚರ ವಹಿಸಬೇಕು. ಆ ನಿಟ್ಟಿನಲ್ಲಿ ಶೇಕಡವಾರು ಯಶಸ್ವಿಗೆ ಶ್ರಮಿಸಬೇಕು. ಅಲ್ಲದೆ, ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಮುಂದಾಗಬೇಕು. ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕಾ ಅಭಿಯಾನ ಕೈಗೊಳ್ಳುವಂತೆ ಸಲಹೆ ಮಾಡಿದರು.
ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಲಿಂಗರಾಜ ದೊಡ್ಡಮನಿ ಮಾತನಾಡಿ ” ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕುವುದರಿಂದ ಕಾಲುಬಾಯಿ ರೋಗವನ್ನು ನಿಯಂತ್ರಿಸಬಹುದಾಗಿದೆ. ರೋಗವು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದ್ದು, ಇದನ್ನು ತಡೆಯುವುದು ಅಭಿಯಾನದ ಉದ್ದೇಶವಾಗಿದೆ. ವರ್ಷದಲ್ಲಿ ಕನಿಷ್ಠ ಎರಡು ಬಾರಿ ಲಸಿಕೆ ಹಾಕಿಸುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ 3 ರಿಂದ 5 ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸಬೇಕಿದೆ.
ಹಾಗೆಯೇ, ಗರ್ಭ ಧರಿಸಿದ ಹಸು ಮತ್ತು ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕು. 21ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು. ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 75 ಲಸಿಕಾದಾರರು ರೈತರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ ” ಎಂದು ಮಾಹಿತಿ ನೀಡಿದರು.
ಲಸಿಕೆ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 4 ತಿಂಗಳ ಮೇಲ್ಪಟ್ಟ ಎಲ್ಲಾ ದನ, ಕರು, ಎಮ್ಮೆ, ಹಂದಿಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ 9448647276. ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ 9980360200. ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ವಿರಾಜಪೇಟೆ 9901303996. ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ 9448422269 ಹಾಗೂ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ 9740556311 ಇವರನ್ನು ಸಂಪರ್ಕಿಸಬಹುದು ಎಂದು ಲಿಂಗರಾಜ ದೊಡ್ಡಮನಿ ಅವರು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ
ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ. ತಿಮ್ಮಯ್ಯ, ನೋಡಲ್ ಅಧಿಕಾರಿ ಡಾ.ಶಿಲ್ಪ, ತಾಲ್ಲೂಕು ಪಶು ವೈದ್ಯಾಧಿಕಾರಿಗಳಾದ ಡಾ. ಪ್ರಸನ್ನ, ಡಾ. ರಾಜಶೇಖರ್, ಡಾ. ಗಿರೀಶ್, ಡಾ. ನವೀನ್, ಡಾ. ಶಿಂದೆ, ಸಂಚಾರಿ ಪಶು ಚಿಕಿತ್ಸಾ ಘಟಕದ ಡಾ. ಶರತ್, ಹಾಸನ ಕೆಎಂಎಫ್ ಪ್ರಧಾನ ವ್ಯವಸ್ಥಾಪಕ ಡಾ. ರೂಪೇಶ್ ಕುಮಾರ್ ಸೇರಿದಂತೆ ಇನ್ನಿತರರು ಇದ್ದರು.





