ಕೊಪ್ಪಳ ಜಿಲ್ಲೆ ಕುಕುನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಮೇಲ್ವಿಚಾರಕನನ್ನು ತಾತ್ಕಾಲಿಕ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.
ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿಗೆ ಬೆಳಗಿನ ಜಾವ ಸುಮಾರು 6 ಗಂಟೆ ವೇಳೆಗೆ ಹೆರಿಗೆ ಆಗಿದ್ದು, ಬಾಣಂತಿ ಹಾಗೂ ಮಗುವನ್ನು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ನವಜಾತ ಶಿಶು 1.2 ಕೆಜಿ ತೂಕ ಹೊಂದಿದ್ದು, ಮಗವಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದಂತೆ ತಾಯಿ ಮಗು ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಕುಕುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಕೊಪ್ಪಳ | ಹಣವಾಳ ಪಿಡಿಒ ಅಮಾನತು
ರಾಜ್ಯದ ವಸತಿ ನಿಲಯಗಳಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳು ಜನ್ಮ ನೀಡುತ್ತಿರುವ ಪ್ರಕರಣಗಳು ಆಗಾಗ ಸುದ್ದಿಯಾಗುತ್ತಲೇ ಇವೆ. ಇದು ಆಡಳಿತದ ವೈಫಲ್ಯ ಹಾಗೂ ವಸತಿ ನಿಲಯಗಳು ಹೆಣ್ಣುಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಗಂಭೀರ ಪ್ರಶ್ನೆಗಳನ್ನೆತ್ತಿದೆ. ಸದ್ಯದ ಪ್ರಕರಣದಲ್ಲಿ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿಯ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಸಂಬಂಧಪಟ್ಟ ಇಲಾಖೆಗಳು ಕೂಡಲೇ ಎಚ್ಚೆತ್ತು, ಮುಂದಿನ ದಿನಗಳಲ್ಲಿ ಈ ರೀತಿ ಘಟನೆಗಳು ಸಂಭವಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ.





