ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಪ್ರಾಣ ಬೆದರಿಕೆ ಹಾಕುತ್ತಿರುವ ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ತಮಟೆ ಚಳವಳಿ ನಡೆಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.
ಮಂಡ್ಯದ ಸಂಜಯ ಸರ್ಕಲ್‌ನಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ, ಬಿಜೆಪಿ ಹಾಗೂ RSS ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಹಲವು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಹೊತ್ತಿರುವ RSS ಅನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹಿಸಿದರು.
“ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ನಡೆಸದಂತೆ ಕ್ರಮವಹಿಸಲು ಹೇಳಿದ್ದನ್ನು ನಿಷೇಧಿಸುವಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಬಿಂಬಿಸಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆಯವರ ವಿರುದ್ದ ಸಂವಿಧಾನ ವಿರೋಧಿಗಳಾದ ಮನುವಾದಿಗಳು ಮುಗಿಬಿದ್ದಿದ್ದು, ಅವರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯಾರ್ಥಿನಿಯ ಚಲನವಲನ ತಿಳಿಯಲು ವಾಟ್ಸ್ಯಾಪ್ ಗ್ರೂಪ್: ಮಲ್ಲೇಶ್ವರಂ ಬಳಿ ಹಾಡಹಗಲೇ ಕೊಲೆ
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ ಡಿ ಗಂಗಾಧರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ದಲಿತ ಸಂಘಟನೆ ಮುಖಂಡ ಗುರುಪ್ರಸಾದ್ ಕೆರಗೋಡು, ಎಂ ವಿ ಕೃಷ್ಣ, ಶ್ರೀಧರ್, ದೊಡ್ಡಯ್ಯ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಲವ, ಕಬ್ಬಾಳಯ್ಯ, ಹೊಂಬಯ್ಯ, ಹರೀಶ್, ಸಿ ಎಂ ದ್ಯಾವಪ್ಪ, ನರಸಿಂಹಮೂರ್ತಿ, ಗಂಗರಾಜು, ನಿರಂಜನ್, ನಾಗೇಶ್, ಭೈರ, ಕೆಂಪರಾಜು ಹಾಗೂ ರಾಜೇಂದ್ರ ಸೇರಿದಂತೆ ಹಲವರು ಇದ್ದರು.





