ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಅವರು ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.
ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿನೀಡಿ, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.
“ರೈತರ ಸಂಕಷ್ಟವನ್ನು ನೀಗಿಸಲೆಂದೇ ಸರ್ಕಾರ ಅನೇಕ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಹೊರತಾಗಿಯೂ ಇಂತಹ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿರುವುದು ವಿಷಾದನೀಯ. ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರಧನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೆಚ್ಚುವರಿ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಕ್ರಮ ವಹಿಸಲಾಗುವುದು” ಎಂದು ಸುದ್ದಿಗಾರರಿಗೆ ಹೇಳಿದರು.
“ಮೃತರ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸರ್ವೆ ನಡೆಸಿ, ಆ ಜಾಗವನ್ನು ಕುಟುಂಬಸ್ಥರಿಗೆ ನೀಡುವ ಸಾಧ್ಯತೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.





