ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಮಸ್ಕಿ ತಾಲ್ಲೂಕು ಮುದಗಲ್ ಪೋಲಿಸ್ ಠಾಣಾ ವ್ಯಾಪ್ತಿಯ ಜಕ್ಕೆರುಮಡು ತಾಂಡಾದಲ್ಲಿ ನಡೆದಿದೆ.
ಚಂದವ್ವ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಗ ಕುಮಾರ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆವಾಗವಾಗ ಊರಿಗೆ ಬಂದಾಗ ತನ್ನ ತಾಯಿ ಜೊತೆ ಹಣದ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದು, ಜನೆವರಿ ೨೫ ರಂದು ಮನೆಗೆ ಬಂದು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದನು ಎಂದು ಹೇಳಲಾಗಿದೆ.
ಜನವರಿ 26ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಕುಮಾರ ತನ್ನ ತಾಯಿ ಚಂದವ್ವ ಅವರೊಂದಿಗೆ ಹಣದ ವಿಚಾರವಾಗಿ ಜಗಳವಾಡಿದ್ದು, ಮಗನು ತಾಯಿಯ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಚಂದವ್ವ ಅವರನ್ನು ತಕ್ಷಣ ಮುದಗಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕುಮಾರನನ್ನು ಪೋಲಿಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಮಾಹಿತಿ ಪಡೆದ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





