ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಮುಧೋಳ, ಜಮಖಂಡಿ, ರಬಕವಿ-ಬನಹಟ್ಟಿ ತಾಲ್ಲೂಕುಗಳಲ್ಲಿ ನ.13ರ ರಾತ್ರಿಯಿಂದ ನ.16ರ ಬೆಳಗ್ಗೆ 8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
“ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಿಚ್ಚಿ ಪ್ರತಿಭಟನೆ ಮಾಡಲಾಗುತ್ತಿದೆ. ಹೆಚ್ಚಿನ ಹಾನಿಯಾಗದಂತೆ ತಡೆಯಲು ಪ್ರತಿಭಟನೆ, ಮುಷ್ಕರ, ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.
ಕಾರ್ಖಾನೆ ಬಳಿ ನಡೆದ ಕಲ್ಲು ತೂರಾಟದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ, ರೈತ ವಿಠ್ಠಲ ಹೊಸಮನಿ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬಾಗಲಕೋಟೆ | ಕಲಾ ಪ್ರತಿಭೋತ್ಸವಕ್ಕೆ ಅರ್ಜಿ ಆಹ್ವಾನ
ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಕಬ್ಬು ಸೇರಿ ಹಲವು ಟ್ರಾಕ್ಟರ್‌ಗಳು ಬೆಂಕಿಗಾಹುತಿಯಾಗಿವೆ. ಪ್ರತಿಭಟನಾಕಾರರು ಬೆಂಕಿ ಹಚ್ಚಿಲ್ಲ, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ರೈತರು ಆರೋಪಿಸುತ್ತಿದ್ದಾರೆ.





