ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯ ನೂತನ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ್ ಹಾಗೂ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ನಂತರ ಲೋಯೋಲಾ ವಿದ್ಯಾಕೇಂದ್ರದಲ್ಲಿ ನಡೆದ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆ ಹಾಗೂ ಸರ್ಕಾರಿ ನೌಕರರ ಸೇವಾ ಮನೋಭಾವವನ್ನು ಶ್ಲಾಘಿಸಿದರು. ತಾವು ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ನೌಕರರ ಹಿತಾಸಕ್ತಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೆನೆಂದು ಅವರು ಹೇಳಿದರು. ರಾಜ್ಯದ ಪ್ರಗತಿಯತ್ತ ಕಾರ್ಯಾಂಗ ಮತ್ತು ಶಾಸಕಾಂಗ ಒಟ್ಟಾಗಿ ಕೆಲಸ ಮಾಡಬೇಕೆಂದು ಅವರು ಒತ್ತಿ ಹೇಳಿದರು. ನೌಕರರ ಸಂಘದ ಅಧ್ಯಕ್ಷರಾಗಿರುವ ಸಿ.ಎಸ್. ಷಡಾಕ್ಷರಿ ಅವರು ನೌಕರರ ಪರವಾಗಿ ಧ್ವನಿ ಎತ್ತುತ್ತಿರುವುದು ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಹೊಸ ನೌಕರ ಭವನ ನಿರ್ಮಾಣಕ್ಕಾಗಿ 10 ಲಕ್ಷ ರೂ. ನಿಧಿ ನೀಡಿರುವ ಶಾಸಕ ಶಿವರಾಮ ಹೆಬ್ಬಾರ ಅವರ ನೆರವನ್ನು ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರು ಸ್ಮರಿಸಿದರು.
ಪ್ರಸ್ತುತ ರಾಜ್ಯದಲ್ಲಿ 34ಕ್ಕೂ ಹೆಚ್ಚು ಇಲಾಖೆಯಲ್ಲಿ 2.71 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದರಿಂದ ನೌಕರರ ಮೇಲೆ ಅಧಿಕ ಕೆಲಸದ ಒತ್ತಡ ಮೂಡಿದೆ. ಇದು ಅವರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ, ಆದ್ದರಿಂದ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಸರ್ಕಾರಿ ನೌಕರರು ಅನೇಕ ಸವಾಲುಗಳ ನಡುವೆಯೂ ಕಷ್ಟಪಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಉತ್ತಮ ಆಡಳಿತ ನೀಡಬೇಕಾದರೆ ನೌಕರರ ಪಾತ್ರ ಅತ್ಯಂತ ಮಹತ್ವದ್ದು, ನೌಕರರ ಹಿತಾಸಕ್ತಿಗಾಗಿ ಹಲವು ಜನಪರ ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತರಲಾಗುತ್ತಿದೆ. ಇತ್ತೀಚೆಗೆ ಸರ್ಕಾರ ಮಹಿಳೆಯರಿಗೆ ವರ್ಷಕ್ಕೆ 12 ದಿನ ಮುಟ್ಟಿನ ರಜೆ ನೀಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಇನ್ನೂ ಹಲವಾರು ನೌಕರ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ನೌಕರರ ಕಲ್ಯಾಣಕ್ಕಾಗಿ ಕ್ಯಾಂಟೀನ್ ಯೋಜನೆ, ಆರೋಗ್ಯ ವಿಮೆ ಯೋಜನೆ, ಅಪಘಾತ ವಿಮೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದು ವಿವರಿಸಿದರು. ಸರ್ಕಾರ ಆದಷ್ಟು ಬೇಗ 7ನೇ ವೇತನ ಜಾರಿಗೊಳಿಸಳಿದೆ ಎಂದು ಹೇಳಿದರು ಹಾಗೂ ಎನ್.ಪಿ.ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಕೂಡ ಜಾರಿಗೊಳಿಸಲು ಸರ್ಕಾರದ ಮೇಲೆ ಎಲ್ಲ ರೀತಿಯಲ್ಲೂ ಒತ್ತಡ ಹಾಕಲಾಗುವುದು ಎಂದು ವಿವರಿಸಿದರು.”ಮಕ್ಕಳು ನಮ್ಮ ದೇಶದ ಭವಿಷ್ಯ. ಸಮಾಜದಲ್ಲಿ ಪೋಷಕರ ತಲೆ ಎತ್ತುವಂತೆ ಮಕ್ಕಳು ಬೆಳೆಯಲಿ, ತಂದೆ ತಾಯಿ ತಲೆ ತಗ್ಗಿಸುವಂತಹ ಕೆಲಸವನ್ನು ಮಕ್ಕಳು ಮಾಡಿ ಅವರ ಗೌರವಕ್ಕೆ ಧಕ್ಕೆ ತರಬಾರದು ಎಂದು ವಿಧ್ಯಾರ್ಥಿಗಳಿಗೆ ತಿಳಿಹೇಳಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಹನಮಾಪುರದಲ್ಲಿ ಮನೆಗೆ ಬೆಂಕಿ: ಏಕಾಂಗಿಯಾಗಿ ವಾಸಿಸುತ್ತಿದ್ದ ವೃದ್ಧೆ ಸಾವು
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಶಿವರಾಮ ಹೆಬ್ಬಾರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಮಾಜಿ ಶಾಸಕ ವಿ.ಎಸ್. ಪಾಟೀಲ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಸೇರಿದಂತೆ ತಾಲೂಕು ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.





