ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆ ಭರ್ತಿಗಾಗಿ ಹಾಗೂ ಇನ್ನಿತರ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಕೋವಿಡ್ ಕಾರಣ ಹೇಳಿ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ಕಾಂಗ್ರೆಸ್ ಪಕ್ಷವು ತಾನು ಅಧಿಕಾರಕ್ಕೆ ಬಂದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು 2 ವರ್ಷ 4 ತಿಂಗಳು ಕಳೆದರೂ ಸಹ ಒಳ ಮೀಸಲಾತಿ ಹೆಸರಿನಲ್ಲಿ ಯಾವುದೇ ನೇಮಕಾತಿಯನ್ನು ಮಾಡಿಲ್ಲ.
ಉದ್ಯೋಗದ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ನಂತರ ಕಾರ್ಯರೂಪಕ್ಕೆ ತರಬಹುದೆಂದು ಯುವಜನತೆ ನಿರೀಕ್ಷೆಯಲ್ಲಿದ್ದರು. ಆದರೆ, ನಿರೀಕ್ಷೆ ಹುಸಿಯಾಗಿದೆ. 2025-26 ನೇ ಸಾಲಿಗೆ ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಬಿದ್ದಿವೆ. ಅವುಗಳ ನೇಮಕಕ್ಕೆ ಕಿಂಚಿತ್ತು ಪ್ರಯತ್ನಗಳು ನಡೆಯುತ್ತಿಲ್ಲ. ಕೆಲವು ಕುಂಟು ನೆಪಗಳನ್ನು ಹೇಳುತ್ತಾ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ.
ರಾಜ್ಯದ ಎಲ್ಲೆಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನರು ಸರ್ಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದೆಂದು ಹಲವಾರು ವರ್ಷಗಳಿಂದ ಪರೀಕ್ಷೆಗಳ ತಯಾರಿ ನಡೆಸುತ್ತಿದ್ದಾರೆ. 4-5 ವರ್ಷಗಳಿಂದ ನೇಮಕಾತಿಗಳೇ ನಡೆಯದಿರುವುದರಿಂದ ಅದೆಷ್ಟೋ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಯುವಜನರು ಆತ್ಮಹತ್ಯೆಯಂತಹ ಕಠಿಣ, ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರೆ.
ಇನ್ನೊಂದೆಡೆ ಕೆಪಿಎಸ್‌ಸಿಯ ಅಧ್ಯಕ್ಷರು, ಸದಸ್ಯರ ಒಳಜಗಳ ಮತ್ತು ಅದರಲ್ಲಿನ ಭ್ರಷ್ಟಾಚಾರವು ನೇಮಕಾತಿಗಾಗಿ ಕಾಯುತ್ತಿರುವ ಆಕಾಂಕ್ಷಿಗಳಿಗೆ ಬೇಸರ ತರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 59,454 ಹುದ್ದೆಗಳು ಖಾಲಿ ಬಿದ್ದಿವೆ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ 21,381 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಮತ್ತೊಂದೆಡೆ ಆರೋಗ್ಯ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಕಂದಾಯ, ಒಳಾಡಳಿತ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಬಹಳ ದೊಡ್ಡ ಸಂಖ್ಯೆಯ ಹುದ್ದೆಗಳು ಖಾಲಿ ಇರುವುದರಿಂದ ಜನಸಾಮಾನ್ಯರಿಗೆ ಸಿಗಬೇಕಾದ ಸೇವೆಗಳು ಸರಿಯಾಗಿ ತಲುಪುತ್ತಿಲ್ಲ.
ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ತುಂಬಿಕೊಂಡು ಪುಡಿಗಾಸಿಗೆ, ಉದ್ಯೋಗ ಭದ್ರತೆ ನೀಡದೇ ದುಡಿಸಿಕೊಳ್ಳಲಾಗುತ್ತಿದೆ. ಇನ್ನೊಂದೆಡೆ, ಕಳೆದ ಹಲವಾರು ವರ್ಷಗಳಿಂದಲೂ ನೇಮಕಾತಿ ಇಲ್ಲದಿದ್ದರೂ ಜಾತಕ ಪಕ್ಷಿಯಂತೆ ನೇಮಕಾತಿಗಾಗಿ ಕಾಯುತ್ತಾ, ಸಾವಿರಾರು ರೂಪಾಯಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹಾಗೂ ಗ್ರಂಥಾಲಯಗಳಲ್ಲಿ ಓದಲು ಉದ್ಯೋಗಾಕಾಂಕ್ಷಿಗಳು ಖರ್ಚು ಮಾಡಿಕೊಂಡಿದ್ದಾರೆ.

ಸಾಲ ಮಾಡಿ ಪೋಷಕರು ಮಕ್ಕಳಿಗೆ ಕೋಚಿಂಗ್ ಕೊಡಿಸುತ್ತಿದ್ದಾರೆ. ಇಷ್ಟೆಲ್ಲಾ ಗಂಭೀರ ಸಮಸ್ಯೆಗಳನ್ನು ಯುವಜನರು ಎದುರಿಸುತ್ತಿದ್ದರೂ ಸಹ ಸರ್ಕಾರಗಳು ಈ ಬಗ್ಗೆ ಮಾನವೀಯವಾಗಿ ವರ್ತಿಸುತ್ತಿಲ್ಲ. ಈಗಲಾದರೂ, ಸರ್ಕಾರಗಳು ಯಾವುದೇ ನೆಪಗಳನ್ನು ಹೇಳದೆ, ಕೆಲವೇ ಸಾವಿರ ಹುದ್ದೆಗಳ ಭರ್ತಿಗೆ ಸೀಮಿತಗೊಳಿಸದೆ ಎಲ್ಲ ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಮುಖ್ಯವಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ತರುವ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ನಾಲೈದು ವರ್ಷಗಳಿಂದ ನೇಮಕಾತಿಗಳು ನಡೆಯದ ಕಾರಣ ಅರ್ಹತಾ ವಯೋಮಿತಿಯಲ್ಲಿಯೂ ಕನಿಷ್ಠ ಐದು ವರ್ಷಗಳ ಸಡಿಲಿಕೆ ಮಾಡಬೇಕು.
ಈ ಸುದ್ದಿ ಓದಿದ್ದೀರಾ? ಸತತ ಮಳೆಗೆ ಮಂಡ್ಯ ತತ್ತರ; ರೈತರ ನಷ್ಟ, ಸಾರ್ವಜನಿಕರ ಪರದಾಟ!
ಇಂತಹ ಪರಿಸ್ಥಿತಿಯಲ್ಲಿ ಇತ್ತೀಚಿಗೆ ಕೆ.ಇ.ಎ ಮೂಲಕ ಹೊರಡಿಸಿರುವ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳಿಗೆ ದುಬಾರಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅದನ್ನು ಕೂಡಲೇ ಕೈಬಿಡಬೇಕು. ಈ ಕೆಳಗಿನ ಹಕ್ಕೋತ್ತಾಯಗಳನ್ನು ಯಾವುದೇ ವಿಳಂಬವಿಲ್ಲದೆ ಪರಿಹರಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಹಕ್ಕೊತ್ತಾಯಗಳು:
- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿಮಾಡಲು ಕ್ರಮ ಕೈಗೊಳ್ಳಿ.
- ನೇಮಕಾತಿಗಳಲ್ಲಿ ಅಕ್ರಮ ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಿ.
- ರಾಜ್ಯದಲ್ಲಿ ಕಳೆದ ನಾಲೈದು ವರ್ಷಗಳಿಂದ ಸರಿಯಾಗಿ ನೇಮಕಾತಿಗಳು ನಡೆಯದ ಹಿನ್ನೆಲೆಯಲ್ಲಿ ಎಲ್ಲಾ ನೇಮಕಾತಿಗಳಿಗೆ ಅರ್ಹ ವಯೋಮಿತಿಯನ್ನು ಕನಿಷ್ಠ ಐದು ವರ್ಷಗಳ ಸಡಿಲಿಕೆ ಮಾಡಿ.
- ಪೊಲೀಸ್ ಕಾನ್ಸ್ ಟೆಬಲ್ ವಯೋಮಿತಿಯನ್ನು ಸಾಮಾನ್ಯ ವರ್ಗ 30. ಎಸ್.ಸಿ, ಎಸ್.ಟಿ, ಒಬಿಸಿ ವರ್ಗಕ್ಕೆ 33 ವರ್ಷಗಳಿಗೆ ಹೆಚ್ಚಿಸಿ.
- ಸರ್ಕಾರಿ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಕೈ ಬಿಟ್ಟು ಎಲ್ಲಾ ಹುದ್ದೆಗಳನ್ನು ಕಾಯಂ ಆಧಾರದಲ್ಲಿ ನೇಮಕಾತಿ ಮಾಡಿ.
- ಇತ್ತೀಚೆಗೆ ಕೆ.ಇ.ಎ ಹೊರಡಿಸಿರುವ ನೋಟಿಫಿಕೇಶನ್‌ನಲ್ಲಿ ನಿಗದಿಪಡಿಸಿರುವ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಿ.
ಪ್ರತಿಭಟನೆಯಲ್ಲಿ ಸಮಿತಿಯ ಸಂಚಾಲಕಿ ನೀತುಶ್ರೀ, ಸಹ ಸಂಚಾಲಕರಾದ ಆದರ್ಶ್, ರಕ್ಷಿತ್, ಗಿರೀಶ್, ಸುನಿಲ್ ಟಿ ಆರ್, ಸುಮ ಎಸ್, ರಣಜಿತ್, ಪೂರ್ಣಿಮಾ, ಅನಿಲ್, ಸಿಂಚನ, ಪೃಥ್ವಿ, ರಜತ್, ಅನುಷ, ನಂಜುಂಡ ಇನ್ನಿತರರು ಇದ್ದರು.





