- ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್
- ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ
ಅನೈತಿಕ ಪೊಲೀಸ್ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡಲು ಗೃಹ ಇಲಾಖೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಅನ್ನು ಕಳೆದ ತಿಂಗಳು ಸ್ಥಾಪಿಸಿತ್ತು. ಇದರ ಬೆನ್ನಲ್ಲೇ ಚುರುಕಾಗಿರುವ ಮಂಗಳೂರು ನಗರ ಪೊಲೀಸರು, ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ಗೆ ಸಂಬಂಧಿಸಿ ಕಳೆದ 30 ದಿನದಲ್ಲಿ 21 ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, “ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್ಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆಯೂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೂಡ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.





