- ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ
- ದಲಿತ ವಿದ್ಯಾರ್ಥಿ ಪರಿಷತ್ ನಿಯೋಗದಿಂದ ಅಧಿಕಾರಿಗಳ ಭೇಟಿ
ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.
ರಾಯಚೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ಲ್ಯಾಪ್ ಟಾಪ್ ಯೋಜನೆ ಅಡಿಯಲ್ಲಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಿಲ್ಲ. ಆದ್ದರಿಂದ ಬಡ ದಲಿತ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದ್ದು, ಯೋಜನೆಯಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕೂಡಲೇ ಸಂಬಂಧಪಟ್ಟ ಇಲಾಖೆ ಈ ಯೋಜನೆ ಅಡಿಯಲ್ಲಿ ಅರ್ಜಿಗಳನ್ನು ಕರೆದು ಅರ್ಹ ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಿಸಬೇಕು. 2022-23ನೇ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯವೇತನ ಕೂಡ ಸಂಪೂರ್ಣ ಬಿಡುಗಡೆಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ವಿವರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಯೋಗದಿಂದ ರೋಗ ಮುಕ್ತ ಜೀವನ ಸಾಧ್ಯ: ಎಂಎಲ್‌ಸಿ ಸಂಕನೂರ
ಆದ್ದರಿಂದ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ವಿದ್ಯಾರ್ಥಿ ಯುವ ಜನರ ಈ ಬೇಡಿಕೆ ಈಡೇರಿಸಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತು ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಸಂಚಾಲಕ ಮೌನೇಶ್ ಜಾಲವಾಡಗಿ, ರಾಯಚೂರು ಸಾಮಾಜಿಕ ಮುಖಂಡರಾದ ವಿಶ್ವನಾಥ ಪಟ್ಟಿ, ಈರಣ್ಣ ಡಿಎಸ್ಎಸ್, ಶರಣಬಸವ ಹಾಗೂ ಇತರರಿದ್ದರು.




