ಜಲ್ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ಒಂದೆರೆಡು ತಿಂಗಳು ಕಳೆದರೂ ಇನ್ನೂ ಸಮರ್ಪಕವಾಗಿ ಮುಚ್ಚದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ.
ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ 9ನೇ ವಾರ್ಡಿನ ಮುಖ್ಯ ರಸ್ತೆಗೆ ಆಳವಾದ ಗುಂಡಿಗಳನ್ನು ತೋಡಲಾಗಿದ್ದು, ಕಾಮಗಾರಿ ಮುಗಿದ ಬಳಿಕ ರಸ್ತೆಗಳನ್ನು ಮರುಸ್ಥಾಪಿಸದೆ ಬಿಟ್ಟಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ರಾತ್ರಿ ಸಮಯದಲ್ಲಿ ಗುಂಡಿಗಳು ಕಾಣಿಸದ ಕಾರಣ ಅಪಘಾತಗಳ ಭೀತಿ ಹೆಚ್ಚಾಗಿದೆ ಎಂದು ನಾಗರಿಕರು ದೂರಿದ್ದಾರೆ. ಶಾಲಾ ಮಕ್ಕಳು, ವೃದ್ಧರು ಮತ್ತು ದ್ವಿಚಕ್ರ ವಾಹನ ಸವಾರರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲಾ ಉತ್ಸವ; ಕಲಾತಂಡಗಳ ಪ್ರದರ್ಶನಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಚಾಲನೆ
ಈ ಕುರಿತು ಪ್ರತಿಕ್ರಿಯಿಸಿದ ಡಿವೈಎಫ್ಐ ಮುಖಂಡ ರಿಯಾಜ್ ಖುರೇಷಿ ಅವರು, “ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ಸಾರ್ವಜನಿಕರ ಸುರಕ್ಷತೆ ಮೊದಲು ಗಮನಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕಾಮಗಾರಿ ಪೂರ್ಣಗೊಳಿಸಿ ರಸ್ತೆಗಳನ್ನು ಸರಿಪಡಿಸಬೇಕು. ಪಟ್ಟಣದ ಹಲವು ಮಾರ್ಗಗಳಲ್ಲಿ ಕಾಮಗಾರಿ ಹೆಸರಿನಲ್ಲಿ ಅರೆಬರೆ ಕೆಲಸ ನಡೆಸಿ, ಹಿಂದೆ ಉತ್ತಮ ಸ್ಥಿತಿಯಲ್ಲಿ ಇದ್ದ ರಸ್ತೆಗಳನ್ನು ಹಾಳು ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.





