ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಆಯತಪ್ಪಿ ಬೈಕ್‌ನಿಂದ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಲಕ್ಷ್ಮಣ್ (50) ಎಂದು ಗುರುತಿಸಲಾಗಿದೆ. ಅವರು ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ನಿವಾಸಿಯೇ ಆಗಿದ್ದಾರೆ ಎಂದು ತಿಳಿದುಬಂದಿದೆ.
ಲಕ್ಷ್ಮಣ್ ಅವರು ಕಳೆದ ಒಂದೂವರೆ ವರ್ಷದಿಂದ ರಾಮನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ಬೈಕ್‌ನಲ್ಲಿ ತೆರಳುತ್ತಿದ್ದಾಗ, ಬೈಕ್ ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ. ಈಜು ಬಾರದ ಲಕ್ಷ್ಮಣ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




