ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಕೃತಿ ವಿಕೋಪ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ, ಸಮಸ್ಯೆ ಕಂಡು ಬರುವ ಗ್ರಾಮಗಳಿಗೆ ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಆದ್ಯತೆ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳಿಗೆ ಒತ್ತು ನೀಡಬೇಕು ಎಂದು ನಿರ್ದೇಶನ ನೀಡಿದರು.
ರಸಗೊಬ್ಬರ, ಬಿತ್ತನೆ ಬೀಜ, ಬೆಳೆ ಹಾನಿ ಪರಿಹಾರ, ಇಲಾಖೆಗಳಲ್ಲಿರುವ ಯೋಜನೆಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಎಲ್ಲಾ ಇಲಾಖಾಧಿಕಾರಿಗಳು ಅಗಿಂದಾಗ್ಗೆ ಕ್ಷೇತ್ರ ಭೇಟಿ ನೀಡಬೇಕು. ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳು ಗುಣಮಟ್ಟದ ಬಗ್ಗೆ ಪರಿಶೀಲಿಸಬೇಕು. ನಿಗದಿತ ಅವಧಿಯೊಳಗೆ ಎಲ್ಲಾ ಕಾರ್ಯಗಳನ್ನು ಪೂರ್ಣಗೊಳಿಸಿ ಸರ್ಕಾರದ ಅನುದಾನ ವ್ಯಪಗತವಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿನಿಲಯಗಳಿಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಮೂಲಭೂತ ಸೌಕರ್ಯದ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯು ಕಂಡು ಬಂದಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ವಾಡಿಕೆ ಮಳೆಯು 320 ಮೀ.ಮೀ ಇದ್ದು, ಪ್ರಸ್ತುತ ಕೇವಲ 211 ಮೀ.ಮೀ ಮಳೆಯಾಗಿದ್ದು, ಶೇ.34ರಷ್ಟು ಮಳೆಯ ಕೊರತೆ ಉಂಟಾಗಿರುತ್ತದೆ. ಮಳೆಯ ಕೊರತೆಯಿಂದಾಗಿ ಅಂತರ್ ಜಲಮಟ್ಟ ಕುಸಿತದಿಂದ ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗಿರುತ್ತದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಯಾವುದೇ ಮಾನವ ಜೀವಹಾನಿ ಸಂಭವಿಸಿರುವುದಿಲ್ಲ. ಪೂರ್ವ ಮುಂಗಾರಿನಲ್ಲಿ ಒಂದು ಜಾನುವಾರು ಹಾಗೂ ಮುಂಗಾರು ಹಂಗಾಮಿನಲ್ಲಿ ಒಂದು ಜಾನುವಾರು ಒಟ್ಟು 2 ಜಾನುವಾರುಗಳು ಸಿಡಿಲು ಬಡಿತದಿಂದ ಮೃತಪಟ್ಟಿದ್ದು, ಸಂಬಂಧಪಟ್ಟ ಜಾನುವಾರುಗಳ ಮಾಲೀಕರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 16 ಮನೆಗಳು ಭಾಗಶಃ ಹಾಗೂ 2 ಮನೆಗಳು ಸಂಪೂರ್ಣ ಹಾನಿಯಾಗಿದ್ದು ಪರಿಹಾರ ನೀಡಲು ಕ್ರಮವಹಿಸಲಾಗುತ್ತಿದೆ ಎಂದರು.
ಪೂರ್ವ ಮುಂಗಾರಿನಲ್ಲಿ 241.03 ಹೆಕ್ಟೆರ್ ನಷ್ಟು ಬೆಳೆ ಹಾನಿಯಾಗಿದ್ದು, ಈಗಾಗಲೇ ಡಿ.ಬಿ.ಟಿ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಖಾತೆಯಿಂದ ಪರಿಹಾರ ನೀಡಲಾಗಿದೆ. ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 8.77ಹೆಕ್ಟೆರ್ ನಷ್ಟು ಮಾತ್ರ ಬೆಳೆ ಹಾನಿಯಾಗಿದ್ದು, ಭೂಮಿ ಪರಿಹಾರ ತಂತ್ರಾಂಶದಲ್ಲಿ ಮಾಹಿತಿ ಇಂಢಿಕರಿಸಿ ಪರಿಹಾರ ವಿತರಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ಬಿಸಿಯೂಟ ಕಾರ್ಮಿಕರ ಗೌರವಧನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.





