ಶಿವಮೊಗ್ಗದ ಲಯನ್ ಸಫಾರಿ ಬಳಿಯ ಮುದ್ದಿನ ಕೊಪ್ಪದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಮುಖಿ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಸಿದ್ದಣ್ಣ, ಚಂದ್ರು ಹಾಗೂ ಇಮಾಮ್ ಸಾಬ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಬೆಳವನ್ನೂರು ಮೂಲದವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಇನ್ನೋವಾ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ವಿದೇಶಿಯರಿದ್ದು, ಅವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಸಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅತಿವೇಗದ ಪ್ರಯಾಣದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.





