ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಡಿಸೆಂಬರ್ 30 ರಿಂದ ಜಾರಿಗೆ ಬರಲಿದ್ದು, ಭಕ್ತಾದಿಗಳಿಗೆ ಮತ್ತು ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ.
ಪ್ರಸ್ತುತ ಈ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಜಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆಯ ಅಗತ್ಯತೆಯನ್ನು ಮನಗಂಡು, ಕೆಲವು ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಈ ಆದೇಶದ ಅನ್ವಯ, ಸದರಿ ರಸ್ತೆಯಲ್ಲಿ ಕೇವಲ ಬಸ್‌ಗಳಿಗೆ ಮಾತ್ರ ಸಂಚರಿಸಲು ಅವಕಾಶವಿದ್ದು, ಇತರ ಯಾವುದೇ ಭಾರಿ ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಗಳಲ್ಲಿ ಬಸ್‌ಗಳ ವೇಗಮಿತಿಯನ್ನು ಗಂಟೆಗೆ 20 ಕಿಲೋಮೀಟರ್‌ಗೆ ಸೀಮಿತಗೊಳಿಸಬೇಕು ಎಂದು ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?
ಅಲ್ಲದೆ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಅಗತ್ಯವಿರುವ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ. ಇನ್ನು ರಸ್ತೆ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಿಶೇಷ ಸೂಚನೆ ನೀಡಲಾಗಿದ್ದು, ರಸ್ತೆಯ ತಿರುವುಗಳಲ್ಲಿ ಹಾಗೂ ಅಗತ್ಯವಿರುವ ಕಡೆಗಳಲ್ಲಿ ವೇಗದ ಮಿತಿ ಫಲಕ ಮತ್ತು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಈ ಮೂಲಕ ರಸ್ತೆ ಕಾಮಗಾರಿಯ ನಡುವೆಯೂ ಮಾರಿಕಾಂಬಾ ಜಾತ್ರೆಗೆ ಬರುವ ಭಕ್ತರಿಗೆ ಸುರಕ್ಷಿತ ಪ್ರಯಾಣದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ.





