ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ವಿದ್ಯಾರ್ಹತೆಯೊಂದಿಗೆ ವಿವಿಧ ವ್ಲತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ.ಪಿ. ಸದಾನಂದಮಯ್ಯ ಬ್ಲಾಕ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ತುಮಕೂರು ವಿಶ್ವವಿದ್ಯಾನಿಲಯದ ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 125ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡಿದ್ದು, ಈಗಾಗಲೇ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆಫ್‌ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಸ್ಥಳಕ್ಕೆ ಆಗಮಿಸಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಈ ಮೇಳದಲ್ಲಿ ಉದ್ಯೋಗ ಸಿಗುವಂತಾಗಲಿ ಎಂದು ತಿಳಿಸಿದರು.
ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಇಂತಹ ಮೇಳಗಳನ್ನು ನಿಯಮಿತವಾಗಿ ಆಯೋಜಿಸಲಾಗುತ್ತಿದ್ದು, ಕೌಶಲ್ಯಗಳಿದ್ದರೂ ಉದ್ಯೋಗ ಪಡೆಯುವ ದಾರಿಗಳು ತಿಳಿಯದೆ ಹಲವರು ಅಸಹಾಯಕರಾಗಿರುತ್ತಾರೆ. ಇಂತಹ ಉದ್ಯೋಗ ಮೇಳಗಳು ಅವರಿಗೆ ದೊಡ್ಡ ವೇದಿಕೆಯಾಗಿ ಪರಿಣಮಿಸುತ್ತದೆ ಎಂದು ಹೇಳಿದರು.
ನಿರುದ್ಯೋಗದಿಂದ ಕೆಲವು ಯುವಕರು ನಿಸ್ಸಹಾಯಕರಾಗಿ ದಾರಿ ತಪ್ಪುವ ಸಾಧ್ಯತೆಗಳು ಹೆಚ್ಚಿರುವುದರಿಂದ, ಆರಂಭದಲ್ಲಿ ಕಡಿಮೆ ಸಂಬಳವಾಗಿದ್ದರೂ ಪರವಾಗಿಲ್ಲ. ಯಾವುದಾದರೂ ಕೆಲಸದಲ್ಲಿ ತೊಡಗಿಕೊಂಡು ಅನುಭವ ಪಡೆಯುತ್ತಾ ಹಂತ-ಹಂತವಾಗಿ ಸಂಬಳವೂ ಹೆಚ್ಚುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಕಿಶೋರ್, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಪ್ರಾಧ್ಯಾಪಕ ಪರಶುರಾಮ ಕೆ.ಜಿ. ಸೇರಿದಂತೆ ಮತ್ತಿತರರು ಇದ್ದರು.





